ಮುಡಿಪು ಎಂಡಿಎಂಎ ಮಾರಾಟ ಇಬ್ಬರ ಬಂಧನ

arrested
Published on

ಮಂಗಳೂರು: ಮುಡಿಪು ಮೂಳೂರಿನಲ್ಲಿ ಶುಕ್ರವಾರ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಂಟ್ವಾಳ ಕೊಲ್ನಾಡು ಬೊಲ್ಪಾದೆ ಹೌಸ್‌ನ ಅಬ್ದುಲ್ ರಹಿಮಾನ್(42) ಮತ್ತು ಇಳಂತಿಲ ಗ್ರಾಮದ ಜೋಗಿಬೆಟ್ಟಿನ ಮೊಹಮ್ಮದ್ ಜಿಯಾದ್(22)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಆರೋಪಿಗಳಿಂದ 1.75 ಲ.ರೂ. ಮೌಲ್ಯದ 35 ಗ್ರಾಂ ಎಂಡಿಎಂಎ, 2 ಮೊಬೈಲ್‌ಗಳು, ತೂಕಮಾಪನ, ಮಾರುತಿ ಆಲ್ಟೋ 800 ಕಾರು ಸೇರಿದಂತೆ ಒಟ್ಟು 4.95 ಲ.ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಎಂಡಿಎಂಎ ಡ್ರಗ್ಸ್‌ನ್ನು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯಿಂದ ಖರೀದಿಸಿ ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ಆರೋಪಿತರ ಪೈಕಿ ಅಬ್ದುಲ್ ರಹಿಮಾನ್‌ನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿದ್ದವು. ಮೊಹಮ್ಮದ್ ಜಿಯಾದ್ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಸೇವನೆ ಮಾಡಿದ ಪ್ರಕರಣ ದಾಖಲಾಗಿತ್ತು.


ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net