

ಹುಬ್ಬಳ್ಳಿ : ಇಲ್ಲಿನ ಮೂರುಸಾವಿರ ಮಠದ ಜಗದ್ಗುರು ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಅವರ ಪುಣ್ಯ ಸ್ಮರಣೋತ್ಸವ ಹಾಗೂ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮೇ 26ರಂದು ಬೆಳಗ್ಗೆ 11ಗಂಟೆಗೆ ಶ್ರೀ ಜಗದ್ಗುರು ಮೂರುಸಾವಿರ ಮಠ ಮಹಾಸಂಸ್ಥಾನ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಸಕ್ತ ಸಾಲಿನ ಮೂಜಗಂ ಸಾಹಿತ್ಯ ಪ್ರಶಸ್ತಿಗೆ ನಾಡೋಜ, ಜಾನಪದ ತಜ್ಞ ಗೋ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಗೋ.ರು. ಚನ್ನಬಸಪ್ಪ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಹಾಗೂ 1995ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಪುಣ್ಯ ಸ್ಮರಣೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸುವರು. ಎರಡೆತ್ತಿನಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ರಾಯನಾಳದ ಶ್ರೀ ಅಭಿನವ ರೇವಣಶಿದ್ದೇಶ್ವರ ಸ್ವಾಮೀಜಿ ಉಪಸ್ಥಿತರಿರುವರು.
ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರಸಾದ ಅಬ್ಬಯ್ಯ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪಾಲಿಕೆ ಸದಸ್ಯೆ ಸುನಿತಾ ಬುರಬುರೆ ಅತಿಥಿಗಳಾಗಿದ್ದು, ಮಾಜಿ ಎಂಎಲ್ಸಿ ಮೋಹನ ಲಿಂಬಿಕಾಯಿ ಅಧ್ಯಕ್ಷತೆ ವಹಿಸುವರು.