

ಹಿರಿಯೂರು: ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಈಚೆಗೆ ಆಯೋಜಿಸಿದ್ದ ತಾಲೂಕಿನ ವಿವಿಧ ವಸತಿ ಶಾಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿ ದಾಖಲಾತಿಗೆ 71 ಸ್ಥಾನಗಳು ಖಾಲಿ ಇದ್ದು, 1463 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಬೆರಳೆಣಿಕೆ ಸ್ಥಾನಕ್ಕೆ ಆಯ್ಕೆ ಮಾಡುವುದು ಕಷ್ಟ. ಮೆರಿಟ್ ಆಧಾರದ ಮೇಲೆ ಪ್ರತಿಭಾವಂತರಿಗೆ ಅವಕಾಶ ಕಲ್ಪಿಸುವಂತೆ ತಾಕೀತು ಮಾಡಿದರು.
ವಸತಿ ಶಾಲೆಗಳ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ
ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ, ಉತ್ತಮ ಫಲಿತಾಂಶ, ಕಲಿಕೆಗೆ ಪೂರಕ ವಾತಾವರಣ ಇರುವುದರಿಂದ ಮುರಾರ್ಜಿ-ಏಕಲವ್ಯ, ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಇದೆ.
ಜಿಲ್ಲೆಯ ವಿವಿಧ 39 ವಸತಿ ಶಾಲೆಗಳಲ್ಲಿ 1760 ವಿದ್ಯಾರ್ಥಿಗಳ ದಾಖಲಾತಿಗೆ ಮಾತ್ರ ಅವಕಾಶ ಇದೆ.
ಪ್ರಸಕ್ತ ವರ್ಷ 7,536 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿದ್ದು, 1,713 ಮಂದಿಗೆ ಅವಕಾಶ ಸಿಕ್ಕಿದೆ.
ಹೆಚ್ಚುವರಿ ದಾಖಲಾತಿಗೆ ಮಂಜೂರಾತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್, ಬಿಸಿಎಂ ಇಲಾಖೆ ಅಧಿಕಾರಿ ಡಾ.ಸುಬ್ರನಾಯ್ಕ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರೇಖಾ, ಜಿಲ್ಲಾ ಸಮನ್ವಯ ಅಧಿಕಾರಿ ರಮೇಶ್, ವಿವಿಧ ವಸತಿ ಶಾಲೆಗಳ ಪ್ರಾಚಾರ್ಯರು ಇದ್ದರು.