ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿಗಳ ಬಂಧನ, ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ

POLICE SHOOT MURDERA CASE
ವಿಜಯಪುರ ಪೊಲೀಸರ ಕಾರ್ಯಾಚರಣೆಯಲ್ಲಿ ಗಾಯಗೊಂಡ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
Published on

ವಿಜಯಪುರ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಇಲ್ಲಿನ ಇಟ್ಟಂಗಿಹಾಳ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿಗಳಾದ ಆಕಾಶ ಕಲ್ಲವ್ವಗೋಳ ಹಾಗೂ ಸುಭಾಷ ಬಗಲಿ ಬಂಧಿತ ಆರೋಪಿಗಳು. ಸೋಮವಾರ ಸುಶೀಲ ಕಾಳೆ ಎಂಬಾತನ್ನು ಬರ್ಭರವಾಗಿ ಹತ್ಯೆಗೈಯ್ಯಲಾಗಿತ್ತು. ಒಟ್ಟು ಆರು ಜನ ಸೇರಿ ಈ ಕೃತ್ಯ ಎಸಗಿ ಪರಾರಿಯಾಗಿದ್ದರು. ಈ ಬಗ್ಗೆ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಚುರುಕಿನ ಕಾರ್ಯಾಚರಣೆಗಿಳಿದಿದ್ದರು. ಮಂಗಳವಾರ ಬೆಳಗ್ಗೆ ಆರೋಪಿಗಳು ಇಟ್ಟಂಗಿಹಾಳ ಕಡೆಗೆ ಹೊರಟಿರುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು ತೂರಿದ್ದಾರೆ. ಹಲ್ಲೆಗೆ ಯತ್ನಿಸಿದ್ದು ಕೂಡಲೇ ಪೊಲೀಸರು ಆರೋಪಿಗಳಿಬ್ಬರ ಕಾಲಿಗೂ ಗುಂಡು ಹಾರಿಸಿ ಬಂಧಿಸಿದ್ದಾರೆ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಇನ್ನೂ ನಾಲ್ವರು ಆರೋಪಿಗಳಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ. ಮುಂದುವರಿದು ಯಾವುದೇ ಗ್ಯಾಂಗ್ ಇದ್ದರೂ ಹೆಡೆಮುರಿ ಕಟ್ಟುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net