ಪೊಲೀಸ್ ಪೇದೆ ಮೇಲೆ ಹಲ್ಲೆ: ಕೊಲೆ ಆರೋಪಿ ಕಾಲಿಗೆ ಗುಂಡೇಟು

Murder accused shot in leg by police Mandya
Published on

ಮಂಡ್ಯ: ಕೊಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಕಾಲಿಗೆ ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್ ಗುಂಡೇಟು ಹೊಡೆದಿದ್ದಾರೆ.
ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಕಾಲಿಗೆ ಗುಂಡು ಹೊಡೆಯಲಾಗಿದೆ. ಕೊಲೆ, ಕೊಲೆ ಯತ್ನ ಹಾಗೂ ರೌಡಿ ಚಟುವಟಿಕೆಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.
ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬಳಿಕ ಗಾಯಗೊಂಡಿದ್ದ ಪೇದೆ ಹಾಗೂ ಆರೋಪಿಯನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜು.30ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಕೊಲೆ ಪ್ರಕರಣ ದಾಖಲಾಗಿತ್ತು. ವೃತ್ತ ನಿರೀಕ್ಷಕ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದರು. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ತನಿಖೆ ವೇಳೆ ಕಾಂತರಾಜು ಕೊಲೆಗೆ ಮುತ್ತುರಾಜ ಅಲಿಯಾಸ್ ಡಕ್ಕ ಸುಫಾರಿ ನೀಡಿರುವ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆತನ ಬಂಧನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದರು. ಮುತ್ತುರಾಜ್ 11 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. 3 ಕೊಲೆ, 3 ಕೊಲೆಗೆ ಯತ್ನ, 2 ರಾಬರಿ ಪ್ರಕರಣ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಿಮ್ಸ್‌ಗೆ ಜಿಲ್ಲಾ ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಮಿಮ್ಸ್‌ಗೆ ಭೇಟಿ ನೀಡಿ ಪೇದೆ ಸಿದ್ದರಾಜು ಆರೋಗ್ಯ ವಿಚಾರಿಸಿದರು.

ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net