ಅಪ್ರಾಪ್ತ ಬಾಲಕಿಯ ಹತ್ಯೆ : ಮೈಸೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

Murder of minor girl Protest by BJP Mahila Morcha in Mysore
Published on

ಮೈಸೂರು: ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ಬಿಜೆಪಿ ನಗರ ಮಹಿಳಾ ಮೋರ್ಚಾ ವತಿಯಿಂದ ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಪ್ರತಿಭಟನೆ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರಣಿ ಹತ್ಯೆಗಳು ಹಾಗೂ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ರೌಡಿಗಳು, ಕಾಮಾಂಧರು ಅಟ್ಟಹಾಸ ಮೆರೆಯುತ್ತಿದ್ದು, ಅವರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಸಾಂಸ್ಕೃತಿಕ ನಗರಿ ಮೈಸೂರು ಅಪರಾಧ ನಗರವಾಗಿ ರೂಪುಗೊಳ್ಳುತ್ತಿದೆ. ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿತ್ತು. ನಗರದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ವಿಫಲರಾಗಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹತ್ಯೆಗೀಡಾಗಿರುವ ಬಾಲಕಿಯ ಕುಟುಂಬಕ್ಕೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಇನ್ನು ಮುಂದೆ ಈ ರೀತಿಯ ಘಟನೆಯಗಳು ನಡೆಯದ ರೀತಿಯಲ್ಲಿ ಎಚ್ಚರ ವಹಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ರೇಣುಕಾರಾಜ್, ಪದಾಧಿಕಾರಿಗಳಾದ ಸವಿತಾ ಗೌಡ, ಮೋನಿಕಾ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net