

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕಳೆದ ಒಂದೂವರೆ ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ನಡೆಸಿರುವ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಸ್ಥಿತಿ ಅಯೋಮಯವಾಗಿದೆ. ಹತ್ಯೆ-ಆತ್ಮಹತ್ಯೆ ಈ ಸರ್ಕಾರದ ಕೊಡುಗೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಬರಗಾಲವನ್ನು ಸರಿಯಾಗಿ ನಿರ್ವಹಿಸಿಲ್ಲ. ಈ ವರ್ಷ ಅತಿವೃಷ್ಟಿಯನ್ನು ಎದುರಿಸಲು ಇವರಿಂದ ಆಗುತ್ತಿಲ್ಲ. ಅತಿಯಾದ ಮಳೆಯಿಂದ ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಿಲ್ಲ. ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿದೆ. ದೆಹಲಿಯಲ್ಲಿ ನನ್ನನ್ನು ಭೇಟಿಯಾಗುವ ಕಾಂಗ್ರೆಸ್ ಶಾಸಕರು ತಮ್ಮ ಓಣಿಯ ರಸ್ತೆಗೆ ಕೇಂದ್ರ ಸರ್ಕಾರದಿಂದ ಹಣ ಇದ್ದರೆ ಕೊಡಿಸಿ ಎಂದು ಕೇಳುತ್ತಿದ್ದಾರೆ ಎಂದು ಹೇಳಿದರು.
ಹಿಂದುಳಿದ ವರ್ಗದವರು ಎಂಬ ಕಾರಣಕ್ಕೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ರಾಜೀನಾಮೆ ಕೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದು ಹಿಂದುಳಿದ ವರ್ಗದ ಬೇರೆ ಯಾರನ್ನಾದರೂ ಸಿಎಂ ಮಾಡಿದರೆ ನಮ್ಮದೇನೂ ಅಭ್ಯಂತರವಿಲ್ಲ. ಹಿಂದುಳಿದ ವರ್ಗಕ್ಕೆ ಸೇರಿದ ದೇವರಾಜ ಅರಸ್, ಎಸ್. ಬಂಗಾರಪ್ಪ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ನಡೆಸಿಕೊಂಡಿತ್ತು ಎಂಬುದನ್ನು ಸಿದ್ದರಾಮಯ್ಯ ಅರಿತುಕೊಳ್ಳಲಿ ತಿರುಗೇಟು ನೀಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅಲ್ಲ, 89 ಕೋಟಿ ರೂ. ಅಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ಸದನದಲ್ಲಿ ಹೇಳಿಕೆ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ವಿರೋಧ ಪಕ್ಷದವರು ಸುಮ್ಮನೆ ಕುಳಿತುಕೊಳ್ಳಬೇಕಾ? ಅಧಿಕಾರದಲ್ಲಿರುವ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.
ತುಂಗಭದ್ರಾ ಅಣೆಕಟ್ಟೆಯ ಕ್ರೆಸ್ಟ್ ಗೇಟ್ ಕಳಚಿ ಹೋಗಿದ್ದು ಗಂಭೀರವಾದ ಸಂಗತಿ. ಸರಿಯಾಗಿ ನಿರ್ವಹಣೆ ಮಾಡದ್ದರಿಂದ ಆಗಿರುವ ಸಮಸ್ಯೆ ಇದು. ಇದಕ್ಕೆ ಅಧಿಕಾರಿಗಳನ್ನು ಜವಾಬ್ದಾರನ್ನಾಗಿ ಮಾಡಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವಂತೆ ಅಲ್ಲಿಯ ಆಂತರಿಕ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಹೇಳಿದರು.