

ಹನೂರು: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಸಭಾಂಗಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣವು ಹಿಂದು ಧರ್ಮದ ಪವಿತ್ರ ಗ್ರಂಥವಾಗಿದ್ದು, ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಯಾಗಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಹಲವು ಆದರ್ಶ ತತ್ವಗಳನ್ನು ಒಳಗೊಂಡಿದೆ. ಹಾಗಾಗಿ ಮಾನವ ಕುಲಕ್ಕೆ ಇಂತಹ ಮಹಾಕಾವ್ಯವನ್ನು ನೀಡಿದ ಮಹರ್ಷಿಗಳು ಶ್ರೇಷ್ಠ ದಾರ್ಶನಿಕರಾಗಿದ್ದು, ಆದಿಕವಿ ಎನಿಸಿಕೊಂಡಿದ್ದಾರೆ. ಆದ್ದರಿಂದ ಇವರ ಆದರ್ಶ ಎಲ್ಲರಿಗೂ ಸ್ಫೂರ್ತಿದಾಯಕ. ಈ ದೆಸೆಯಲ್ಲಿ ಸರ್ಕಾರದಿಂದ ವಾಲ್ಮೀಕಿ ಜಯಂತಿಯನ್ನು ಅ.7 ರಂದು ಆಚರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಜರಿರುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು. ಈ ಬಗ್ಗೆ ಸಮುದಾಯದ ಮುಖಂಡರಿಂದ ಸಲಹೆಯನ್ನು ಪಡೆದು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪಪಂ ಅಧ್ಯಕ್ಷೆ ಮುಮ್ತಾಜ್‌ಬಾನು, ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಉಪ ನೋಂದಣಾಧಿಕಾರಿ ಉಷಾ, ಸೆಸ್ಕ್ ಎಇಇ ರಂಗಸ್ವಾಮಿ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಮುಖಂಡರಾದ ಪುಟ್ಟವೀರನಾಯ್ಕ, ಶಿವಣ್ಣ ಇತರರು ಇದ್ದರು.