

ಸದೇಶ್ ಕಾರ್ಮಾಡ್ ಮೈಸೂರು
ನಗರ ಪಾಲಿಕೆ ಚುನಾವಣೆಯನ್ನು ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ನಡೆಸುವ ಉತ್ಸಾಹವನ್ನು ರಾಜ್ಯ ಸರ್ಕಾರ ತೋರಿತ್ತು. ಆದರೆ, ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ‘ಲೋಕ ಸಮರ’ದ ನಂತರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ.
ಬೆಂಗಳೂರಿನ ಬಿಬಿಎಂಯೊಂದಿಗೆ ಮೈಸೂರು ನಗರ ಪಾಲಿಕೆ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಹಾಗೂ ಮೈಸೂರಿನಲ್ಲಿ ಎರಡು ಸುತ್ತಿನ ಸಭೆ ನಡೆಸಿದ್ದರು. ಬೆಂಗಳೂರಿನಲ್ಲಿ ಜಿಲ್ಲೆಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮೈಸೂರಿನಲ್ಲಿ ನಗರ ಪಾಲಿಕೆ ಕಾಂಗ್ರೆಸ್ ಸದಸ್ಯರ ಸಭೆ ಕರೆದು ಚುನಾವಣೆ ನಡೆಸುವ ಕುರಿತು ಚರ್ಚೆ ನಡೆಸಿದ್ದರು.
ಗ್ಯಾರೆಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆದಷ್ಟು ಬೇಗ ನಡೆಸಿದರೆ ಬಿಬಿಎಂಪಿ ಹಾಗೂ ಮೈಸೂರು ನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಬಹುದು ಎಂಬುದು ರಾಜ್ಯ ಸರ್ಕಾರದ ಲೆಕ್ಕಾಚಾರ ವಾಗಿತ್ತು. ಆದರೆ, ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲೋಕ ಸಮರದತ್ತ ಗಮನವನ್ನು ಕೇಂದ್ರೀಕರಿಸಲು ಆಸಕ್ತಿ ತೋರುತ್ತಿದೆ.
ಲೋಕಸಭೆ ಹತ್ತಿರದಲ್ಲಿರುವ ಸಂದರ್ಭದಲ್ಲಿ ನಗರ ಪಾಲಿಕೆ ಚುನಾವಣೆ ನಡೆಸಿದರೆ ಪ್ರತಿಯೊಂದು ರಾಜಕೀಯ ಪಕ್ಷಗಳು ಸಮಸ್ಯೆಗೆ ಸಿಲುಕುವುದು ನಿಶ್ಚಿತ. ಪಾಲಿಕೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯೇ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಭುಗಿಲೆದ್ದರೆ ಅದರ ನೇರ ಪರಿಣಾಮ ಲೋಕಸಭೆ ಚುನಾವಣೆಯ ಮೇಲೆ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಗರ ಪಾಲಿಕೆ ಚುನಾವಣೆಯ ಕಡೆಗೆ ಆಸಕ್ತಿ ತೋರುತ್ತಿಲ್ಲ.
ನಗರ ಪಾಲಿಕೆಯ 65 ವಾರ್ಡ್‌ಗಳಿಗೆ 31 ಆಗಸ್ಟ್ 2018 ರಂದು ಚುನಾವಣೆ ನಡೆಯಿತು. ನವೆಂಬರ್ 17 ರಂದು ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಅದೇ ದಿನ ಪಾಲಿಕೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಹಾಗಾಗಿ ಈ ಬಾರಿಯ ಕೌನ್ಸಿಲ್‌ನ ಅಧಿಕಾರಾವಧಿ ನ.16ಕ್ಕೆ ಮುಕ್ತಾಯಗೊಂಡಿತು. ರಾಜ್ಯ ಸರ್ಕಾರ ಜನವರಿ ಅಥವಾ ಫೆಬ್ರವರಿಯಲ್ಲಿ ಚುನಾವಣೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ನಗರದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿತ್ತು. ಆದರೆ, ಇದೀಗ ರಾಜ್ಯ ಸರ್ಕಾರ ನಗರ ಪಾಲಿಕೆ ಚುನಾವಣೆ ಕುರಿತು ಆಸಕ್ತಿ ತೋರದೆ ಇರುವುದು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದವರಲ್ಲಿ ನಿರಾಶೆ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಧಿಕಾರಾವಧಿ 2024ರ ಜೂನ್ 16 ರಂದು ಮುಕ್ತಾಯಗೊಳ್ಳಲಿದ್ದು, ಮೇ ಅಥವಾ ಜೂನ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿಯೇ ಇರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.
ಕಳೆದ ಬಾರಿ ಮತದಾರ ಯಾವುದೇ ಪಕ್ಷಗಳಿಗೂ ಸ್ಪಷ್ಟವಾದ ಬಹುಮತ ನೀಡಲಿಲ್ಲ. ಹೀಗಾಗಿ ಆರಂಭದ ಎರಡು ಅವಧಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಆಡಳಿತ ನಡೆಸಿದರೆ ನಂತರದ ಎರಡು ಅವಧಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಆಡಳಿತ ನಡೆಸಿತು. 65 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್ 20, ಜೆಡಿಎಸ್ 17, ಬಿಎಸ್‌ಪಿ 1 ಹಾಗೂ ಐವರು ಪಕ್ಷೇತರ ಸದಸ್ಯರು ಗೆಲುವು ಸಾಧಿಸಿದ್ದರು. ಕಳೆದ ಬಾರಿ ನಗರ ಪಾಲಿಕೆಯ ಕ್ಷೇತ್ರ ಪುನರ್ ವಿಂಗಡಣೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಗರ ಪಾಲಿಕೆ ಚುನಾವಣೆಯಲ್ಲಿ ಕ್ಷೇತ್ರ ಪುನರ್‌ವಿಂಗಡಣೆಯಾಗುವ ಸಾಧ್ಯತೆ ಇಲ್ಲ. ನೇರವಾಗಿ ಪ್ರತಿವಾರ್ಡ್‌ಗೆ ಮೀಸಲಾತಿ ಪ್ರಕಟಿಸಿ ಚುನಾವಣೆ ನಡೆಸಲಾಗುತ್ತದೆ. ಕೆಲವು ವರ್ಷಗಳ ಹಿಂದೆ ನಗರ ಪಾಲಿಕೆ ವ್ಯಾಪ್ತಿಗೆ ಕೆಲವು ಮುಡಾ ಬಡಾವಣೆಗಳು ಸೇರ್ಪಡೆಯಾಗಿದ್ದು, ಈ ಹೊಸ ಬಡಾವಣೆಗಳನ್ನು ಅಕ್ಕಪಕ್ಕದ ವಾರ್ಡ್‌ಗಳಿಗೆ ಸೇರಿಸಿ ಚುನಾವಣೆ ನಡೆಸುವ ಸಾಧ್ಯತೆ ಇದೆ.
ನಗರ ಪಾಲಿಕೆಗೆ ಸಕಾಲದಲ್ಲಿ ಚುನಾವಣೆ ನಡೆಸದೆ ಹೋದರೆ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಪಾಲಿಕೆ ಅಧಿಕಾರಾವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ, ಜನರ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಲು ಜನಪ್ರತಿನಿಧಿಗಳು ಇದ್ದರೆ ಉತ್ತಮ. ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾ ರಿಗಳನ್ನು ಕೈಗೊಳ್ಳಬೇಕಾದರೆ ಕೌನ್ಸಿಲ್ ಸಭೆಯಲ್ಲಿ ಅನುಮತಿಯ ಅವಶ್ಯಕತೆ ಇದೆ. ಆದರೆ, ಪ್ರಸ್ತುತ ಪಾಲಿಕೆಯ ಅಧಿಕಾರಾವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಸಭೆಗಳನ್ನು ನಡೆಸಲು ಸಾಧ್ಯವಾಗದೆ ನಗರ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುವ ಪರಿಸ್ಥಿತಿ ನಿರ್ಮಾಣ ವಾಗಲಿದೆ. ಲೋಕಸಭಾ ಚುನಾವಣೆಯ ನಂತರ ಪಾಲಿಕೆ ಚುನಾವಣೆ ನಡೆಸಿದರೆ ಕನಿಷ್ಠ ಒಂದು ವರ್ಷ ಆಡಳಿತಾಧಿಕಾರಿ ಅವರ ಆಡಳಿತವನ್ನು ನಗರ ಪಾಲಿಕೆ ಕಾಣಲಿದೆ.