

ಮೈಸೂರು: ಪ್ರವಾಸೋದ್ಯಮ ಇಲಾಖೆಯಿಂದ ಜ. 26 ರಿಂದ 28ರವರೆಗೆ ನಗರದ ಮಾನಸಗಂಗೋತ್ರಿ ಆವರಣದಲ್ಲಿ ಆಯೋಜಿಸಿರುವ ‘ಮೈಸೂರು ಫೆಸ್ಟ್ -2024’ ಕಾರ್ಯಕ್ರಮದ ಸ್ಥಳವನ್ನು ಅಧಿಕಾರಿಗಳು ವೀಕ್ಷಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರ, ಕ್ಲಾಕ್ ಟವರ್ ಇನ್ನಿತರ ಸ್ಥಳಗಳನ್ನು ವೀಕ್ಷಿಸಿ, ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಮೈಸೂರು ಫೆಸ್ಟ್-2024 ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಲು ಸೂಚನೆ ನೀಡಿದರಲ್ಲದೆ, ಕಾರ್ಯಕ್ರಮ ಸಂಬಂಧ ಚಿತ್ರಸಂತೆ, ಚಿತ್ರಕಲಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದ ದಿನದಂದು ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಮೊಬೈಲ್ ಶೌಚಗೃಹ, ಸ್ವಚ್ಛತೆಯ ಬಗ್ಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಲು ಅಗತ್ಯವಾದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡುವುದು, ವೇದಿಕೆ ಇನ್ನಿತರ ಕಾರ್ಯಕ್ರಮಗಳು ಯೋಜಿತವಾಗಿ, ಯಾವುದೇ ತೊಂದರೆ ಇಲ್ಲದಂತೆ ನಡೆಯಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ, ಮುಡಾ ಕಾರ್ಯದರ್ಶಿ ಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರುದ್ರೇಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಮೈಸೂರು ಫೆಸ್ಟ್-2024 ಪೋಸ್ಟರನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಬಿಡುಗಡೆ ಮಾಡಿದರು.