ಮೈಸೂರು: ಕಬ್ಬು ಬೆಳೆಗಾರರಿಂದ ಸರ್ಕಾರದ ಅಣಕು ಶವಯಾತ್ರೆ

sugarcane growers association
Published on

ಮೈಸೂರು: ಕಬ್ಬು ಬೆಳೆಗೆ ನಿಗದಿ ಪಡಿಸಿರುವ ಎಫ್‌ಆರ್‌ಪಿ ದರವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಸರ್ಕಾರದ ಅಣಕು ಶವಯಾತ್ರೆ ನಡೆಸಿದರು.

ಪಂಜಾಬ್‌ನಲ್ಲಿ ಟನ್ ಕಬ್ಬಿಗೆ 3800 ರೂ., ಉತ್ತರ ಪ್ರದೇಶದಲ್ಲಿ 3500 ರೂ., ಗುಜರಾತ್‌ನಲ್ಲಿ 4400 ರೂ. ದರ ನಿಗದಿ ಮಾಡಿ ದ್ದಾರೆ. ಹಾಗಾಗಿ ರಾಜ್ಯದಲ್ಲಿ ಕನಿಷ್ಠ ಟನ್ ಕಬ್ಬಿಗೆ 3,500 ರೂ.ನಿಗದಿ ಮಾಡಬೇಕು. ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಯವರು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ. 16 ತಿಂಗಳು ಕಳೆದರೂ ಕಬ್ಬು ಕಟಾವು ಆಗುತ್ತಿಲ್ಲ. ವಿಳಂಬದ ಅವಧಿಗೆ ಬಡ್ಡಿ ಸೇರಿಸಿ ಹೆಚ್ಚುವರಿ ದರ ನೀಡಬೇಕು ಎಂದು ರೈತರು ಒತ್ತಾಯಿಸಿದರು.

ಬೇಡಿಕೆ ಈಡೇರಿಸುವಂತೆ ಹಲವಾರು ತಿಂಗಳಿನಿಂದ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಲಾಬಿಗೆ ಮಣಿಯುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಧರಣಿಯಲ್ಲಿ ಸಂಘದ ಪದಾಧಿಕಾರಿಗಳಾದ ಕಿರಗಸೂರು ಶಂಕರ್, ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net