ಮೈಸೂರು: ಕಸಾಪದಿಂದ ಮತದಾನ ಜಾಗೃತಿ ಜಾಥಾ

Voting Awareness Jatha from Kasapa
Published on

ಮೈಸೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ವತಿಯಿಂದ ಶುಕ್ರವಾರ ನಗರದಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಆವರಣದಿಂದ ಹೊರಟ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮಾತನಾಡಿ, ದೇಶದ ಭವಿಷ್ಯ ನಿರ್ಧರಿಸುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನಕ್ಕೆ ನೀವು ವಿನಿಯೋಗಿಸುವ 5 ನಿಮಿಷವು 5 ವರ್ಷಗಳ ಸುಬಧ್ರವಾದ ಸರ್ಕಾರ ನಿರ್ಮಾಣಕ್ಕೆ ಕಾರಣವಾಗುತ್ತದೆ. ಹೀಗಾಗಿ ಯಾರು ಸಹ ಮತದಾನ ದಿಂದ ದೂರ ಉಳಿಯಬಾರದು ಎಂದು ಮನವಿ ಮಾಡಿದರು.

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಈ ಚುನಾವಣೆಯು ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾಗಿದೆ. ಈ ಹಬ್ಬದಲ್ಲಿ ಎಲ್ಲರು ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಬೇಕು ಎಂದು ಕರೆ ನೀಡಿದರು.

ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಪ್ರಕಾಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಲತಾ ಮೋಹನ್, ಜಂಟಿ ಕಾರ್ಯದರ್ಶಿ ಕೆಂಪಣ್ಣ, ಸಂಘಟನಾ ಕಾರ್ಯದರ್ಶಿ ನಯನಾ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net