

ಮೈಸೂರು: ಏಳನೇ ವೇತನ ಆಯೋಗದ ಸೌಲಭ್ಯ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಪಾಲಿಕೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಅವರು ನಗರ ಪಾಲಿಕೆ ಆವರಣಕ್ಕೆ ಆಗಮಿಸಿ ನೌಕರರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆ ಕೇಳಲು ಮುಖ್ಯಮಂತ್ರಿ ಬಾರದೆ ಇರುವುದು ಖಂಡನೀಯ. ಆದಷ್ಟು ಶೀಘ್ರ ಸಂಬಂಧಪಟ್ಟ ಮಂತ್ರಿಗಳು ನೌಕರರ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಬೇಕು. ನೌಕರರ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೇಳಿದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಜರಿದ್ದರು.
ಸುರೇಶ್ ಕುಮಾರ್ ಭೇಟಿ: ಶಾಸಕ ಟಿ.ಎಸ್.ಶ್ರೀವತ್ಸ ಅವರೊಂದಿಗೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸರ್ಕಾರ ನೌಕರರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಸುರೇಶ್ ಕುಮಾರ್ ಆಗ್ರಹಿಸಿದರು.
ಅಧಿಕಾರಿಗಳು ಹಾಜರು: ನಗರಪಾಲಿಕೆಯ ಹಿರಿಯ ಶ್ರೇಣಿ ಅಧಿಕಾರಿಗಳು ಮಾತ್ರ ಶುಕ್ರವಾರ ಎಂದಿನಂತೆ ಕಚೇರಿಗೆ ಆಗಮಿಸಿ ದೈನಂದಿನ ಕೆಲಸಗಳಲ್ಲಿ ತೊಡಗಿದರು. ಉಳಿದ ನೌಕರರು ಪ್ರತಿಭಟನೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.
ನಗರಪಾಲಿಕೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಶುಕ್ರವಾರ ಪೌರ ಕಾರ್ಮಿಕರು ಸಹ ಬೆಂಬಲ ಸೂಚಿಸಿ ಕೆಲಸಕ್ಕೆ ಗೈರು ಹಾಜರಾಗಿ ನಗರಪಾಲಿಕೆ ಆವರಣಕ್ಕೆ ಆಗಮಿಸಿ ಮುಷ್ಕರದಲ್ಲಿ ಪಾಲ್ಗೊಂಡರು. ಗುತ್ತಿಗೆ ನೌಕರರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಎನ್.ಸುಬ್ಬಣ್ಣ, ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಮೇಯರ್ ಶಿವಕುಮಾರ್, ಮುಡಾ ಮಾಜಿ ಸದಸ್ಯೆ ಎಸ್. ಲಕ್ಷ್ಮೀದೇವಿ ಹಾಗೂ ಇತರರು ಇದ್ದರು.