

ಮೈಸೂರು: ಸ್ವಚ್ಛ ಸರ್ವೇಕ್ಷಣೆಯಲ್ಲಿ ಈ ಬಾರಿ ಮೈಸೂರು ಹಿನ್ನಡೆ ಅನುಭವಿಸಿದ್ದು, ಹಿನ್ನಡೆಗೆ ಕಾರಣವಾದ ಅಂಶಗಳನ್ನು ಅವಲೊ ೀಕಿಸಿ ಮುಂದೆ ರ‌್ಯಾಂಕಿಂಗ್‌ನಲ್ಲಿ ಸುಧಾರಣೆಗೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಚ್ಛ ಸರ್ವೇಕ್ಷಣೆ ರ‌್ಯಾಂಕಿಂಗ್ ನೀಡುವ ಸಂದರ್ಭ ಹಲವಾರು ಮಾನದಂಡಗಳನ್ನು ಅನುಸರಿಸಲಾಗುತ್ತದೆ. ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹ, ಸಂಸ್ಕರಣೆ ಹಾಗೂ ಸ್ವಚ್ಛತೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಮುಂತಾದ ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಬೇರೆ ನಗರಗಳಿಗೆ ಹೋಲಿಕೆ ಮಾಡಿದರೆ ಮೈಸೂರು ನಗರ ಸ್ವಚ್ಛವಾಗಿ ಇದೆ ಎಂದರು.
ಸೂಯೇಜ್‌ಫಾರ್ಮ್‌ನಲ್ಲಿ ಹಲವಾರು ವರ್ಷಗಳಿಂದ ಸಂಗ್ರಹವಾದ ತ್ಯಾಜ್ಯ ವಿಲೇವಾರಿಯಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಈ ತ್ಯಾಜ್ಯವನ್ನು ಆದಷ್ಟು ಬೇಗ ತೆರವುಗೊಳಿಸಲು ಕ್ರಮ ವಹಿಸಲಾಗುವುದು. ಯಾವೆಲ್ಲ ವಿಭಾಗದಲ್ಲಿ ನಾವು ಹಿಂದುಳಿದಿದ್ದೇವೆ ಎಂದು ಪರಿಶೀಲಿಸಿ ಮುಂದಿನ ಬಾರಿ ರ‌್ಯಾಂಕಿಂಗ್‌ನಲ್ಲಿ ಮತ್ತಷ್ಟು ಸುಧಾರಣೆ ಕಾಣಲು ಪ್ರಯತ್ನಿಸಲಾಗುವುದು ಎಂದರು.
ನಂಜನಗೂಡು ನಗರಸಭೆಯಲ್ಲಿ ಕಡತ ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಉಪವಿಭಾಗಾಧಿಕಾರಿ ಅವರಿಗೆ ಆದೇಶ ನೀಡಲಾಗಿದ್ದು, ವರದಿ ಬಂದ ನಂತರ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.