

ನಂಜನಗೂಡು: ಬರಪೀಡಿತ ಪ್ರದೇಶಗಳ ರೈತರಿಗೆ 25 ಸಾವಿರ ರೂ.ಬರ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.12ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ ಗುರುವಾರ ತಾಲೂಕು ರೈತ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಗಂಟೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಈ ಹೋರಾಟಕ್ಕೆ ರೈತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ 217 ತಾಲೂಕು ಬರಗಾಲಕ್ಕೆ ತುತ್ತಾಗಿವೆ. 19ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. 20 ಸಾವಿರ ಕೋಟಿ ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ಭಿಕ್ಷೆ ಬೇಡ ನ್ಯಾಯಯುತ ಪರಿಹಾರ ನೀಡಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವು ಸಿಗದಂತಾಗಿದೆ. ರಾಷ್ಟ್ರೀಕೃತ, ಸಹಕಾರ ಬ್ಯಾಂಕ್ ಸೇರಿದಂತೆ ಎಲ್ಲ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ಖಾಸಗಿ ಬ್ಯಾಂಕ್‌ಗಳು ಸಾಲ ವಸೂಲಾತಿಯನ್ನು ಮೂರು ವರ್ಷದವರೆಗೆ ತಾತ್ಕಾಲಿಕವಾಗಿ ನಿಲ್ಲಿಸಬೇಕು. ತತಕ್ಷಣದಲ್ಲಿ ಬರಪೀಡಿತ ಪ್ರದೇಶಗಳ ರೈತರಿಗೆ 25 ಸಾವಿರ ರೂ.ಬರ ಪರಿಹಾರ ನೀಡಬೇಕು. ರಾಜ್ಯ ಸರ್ಕಾರ ಕಬ್ಬಿನ ಎಸ್‌ಎಪಿ ದರವನ್ನು ತಮಿಳುನಾಡು ಮಾದರಿ ಟನ್‌ಗೆ 800 ರೂ. ಏರಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ತಾಲೂಕ ಅಧ್ಯಕ್ಷ ದೇವನೂರು ವಿಜಯೇಂದ್ರ, ಪಿ.ಸೋಮಶೇಖರ್, ಅಂಬಳೆ ಮಂಜುನಾಥ್, ಗುರುಮೂರ್ತಿ, ಶಿವಶಂಕರ್, ಮಾದೇವಪ್ಪ, ಮಾದೇವ ನಾಯಕ್, ಚೆನ್ನಪ್ಪ, ಮಲ್ಲೇಶ, ಗಿರೀಶ್, ಅಳಗಂಚಿ ಮಹೇಂದ್ರ, ಉಮೇಶ್, ಪುಟ್ಟಬುದ್ಧಿ, ನಾಗೇಂದ್ರ ಸ್ವಾಮಿ, ರೇವಣ್ಣ ಇದ್ದರು.