ಸರಗೂರು: ತಾಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನಕ್ಕೆ ಮಂಗಳವಾರ ಆಷಾಢ ಅಮಾವಾಸ್ಯೆ ವಿಶೇಷ ಪೂಜೆಗೆ ಆಗಮಿಸಿದ್ದ ಭಕ್ತರು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪರದಾಡಿದರು. ಅನೇಕ ಭಕ್ತರು ಕಾಡಿನ ಮಧ್ಯೆ ಕಾಲ್ನಡಿಗೆಯಲ್ಲೇ ತೆರಳಿ ದೇವರ ದರ್ಶನ ಪಡೆದರು.
ಬೇಲದಕುಪ್ಪೆ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ವಿವಿಧೆಡೆಯಿಂದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.
ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಖಾಸಗಿ ವಾಹನ ಸಂಚಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರವೇಶಕ್ಕೆ ನಿರ್ಬಂಧಿಸಿದ್ದರಿಂದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಪ್ರತಿ ವರ್ಷ ಸಾವಿರಾರು ಭಕ್ತರು ಆಷಾಢ ಅಮಾವಾಸ್ಯೆಯಂದು ದರ್ಶನಕ್ಕಾಗಿ ಆಗಮಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸಾರಿಗೆ ಹಾಗೂ ಭದ್ರತಾ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ದೇವಸ್ಥಾನಕ್ಕೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಭಕ್ತರು ಕಾಡಿನ ಮಧ್ಯೆ ಇರುವ ರಸ್ತೆಯಲ್ಲಿ ಕಿಲೋಮೀಟರ್‌ಗಳಟ್ಟಲೇ ನಡೆಯುವ ಅನಿವಾರ್ಯತೆ ಸೃಷ್ಟಿಯಾಗಿತ್ತು.
ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಚನ್ನಗುಂಡಿ ಗ್ರಾಮದ ಗ್ರಾಮಸ್ಥರು ದಾಸೋಹ ವ್ಯವಸ್ಥೆ ಮಾಡಿದ್ದರು.