ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

failed students
failed students
Published on
ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ 2002ರಿಂದೀಚೆಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಹಾಗೂ ಕೋರ್ಸ್ ಪೂರ್ಣಗೊಳಿಸದೆ ಉಳಿದಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಮೈಸೂರು ವಿಶ್ವವಿದ್ಯಾಲಯದ ಶಿಕ್ಷಣ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ.
ಈ ಹಿಂದೆ ಮೂರು ವರ್ಷದ ಪದವಿ ಕೋರ್ಸ್‌ಗೆ ಗರಿಷ್ಠ ಆರು ವರ್ಷಗಳ ಅವಧಿ ನೀಡಲಾಗುತ್ತಿತ್ತು. ಅದೇ ರೀತಿ ಎರಡು ವರ್ಷದ ಸ್ನಾತಕೋತ್ತರ ಪದವಿಗೆ ನಾಲ್ಕು ವರ್ಷಗಳ ಅವಧಿ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿಯೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗದವರಿಗೆ ಈಗ ವಿಶೇಷವಾಗಿ ಒಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹಲವು ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸಲು ಇದರಿಂದ ಅನುಕೂಲವಾಗಲಿದೆ. ಈ ಅವಕಾಶಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳ ನಿಖರ ಸಂಖ್ಯೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಿಳಿದು ಬರಲಿದೆ ಎಂದು ಅವರು ‘ವಿಜಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ಪ್ರತ್ಯೇಕ ವಿಶ್ವವಿದ್ಯಾಲಯಗಳು ಅಸ್ತಿತ್ವಕ್ಕೆ ಬರುವ ಮೊದಲು ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದ ಜಿಲ್ಲೆಗಳ ವಿದ್ಯಾರ್ಥಿಗಳಿಗೂ ಈ ಅವಕಾಶ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net