ಬಾಬೂಜಿ ಒಂದು ಸಮುದಾಯಕ್ಕೆ ಸೀಮಿತರಲ್ಲ

ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಡಾ.ಡಿ.ತಿಮ್ಮಯ್ಯ, ಟಿ.ಎಸ್.ಶ್ರೀವತ್ಸ, ಸಿ.ಎನ್.ಮಂಜೇಗೌಡ, ಮಲ್ಲಿಕಾರ್ಜುನ ಬಾಲದಂಡಿ ಇದ್ದರು.
ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಡಾ.ಡಿ.ತಿಮ್ಮಯ್ಯ, ಟಿ.ಎಸ್.ಶ್ರೀವತ್ಸ, ಸಿ.ಎನ್.ಮಂಜೇಗೌಡ, ಮಲ್ಲಿಕಾರ್ಜುನ ಬಾಲದಂಡಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಂಎಲ್ಸಿ ಡಾ.ಡಿ.ತಿಮ್ಮಯ್ಯ ಅಭಿಪ್ರಾಯ ಪುಣ್ಯಸ್ಮರಣೆ
ಡಾ.ಬಾಬು ಜಗಜೀವನ ರಾಮ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿದ ಧೀಮಂತ ನಾಯಕ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.
ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದ ರೈಲು ನಿಲ್ದಾಣದಲ್ಲಿರುವ ಅವರ ಪ್ರತಿಮೆಗೆ ಸೋಮವಾರ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಬಾಬೂಜಿ ಆದರ್ಶಗಳು, ದೇಶಭಕ್ತಿ ಹಾಗೂ ವ್ಯಕ್ತಿತ್ವ ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದರು.
ಭಾರತದ ರಾಜಕೀಯ ಇತಿಹಾಸದ ಧ್ರುವತಾರೆ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಸಮಾನತೆಯ ಹರಿಕಾರರಾಗಿದ್ದ ಅವರು ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿ 1930ರ ದಶಕದಲ್ಲೇ ರಾಷ್ಟ್ರೀಯ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಗಾಂಧಿ ನೇತೃತ್ವದ ವೈಯಕ್ತಿಕ ಸತ್ಯಾಗ್ರಹದಲ್ಲಿಯೂ ಪಾಲ್ಗೊಂಡಿದ್ದರು ಎಂದು ತಿಳಿಸಿದರು.
ಸತತ 50 ವರ್ಷಗಳ ಕಾಲ ಸಂಸತ್ತಿನಲ್ಲಿ ಸೇವೆ ಸಲ್ಲಿಸಿದ ಅವರು, ಆಹಾರ ಮತ್ತು ಕೃಷಿ ಸಚಿವರಾಗಿದ್ದ ವೇಳೆ ದೇಶದಲ್ಲಿ ಆಹಾರದ ಕೊರತೆ ಎದುರಾಗಿದ್ದರೂ ದೂರದೃಷ್ಟಿಯ ನಿರ್ಧಾರಗಳಿಂದ ಹಸಿರು ಕ್ರಾಂತಿಗೆ ಬುನಾದಿ ಹಾಕಿ ಭಾರತವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದರು ಎಂದು ಹೇಳಿದರು.
1971ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ರಕ್ಷಣಾ ಸಚಿವರಾಗಿದ್ದ ಬಾಬೂಜಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತೀಯ ಸೇನೆ ಐತಿಹಾಸಿಕ ವಿಜಯ ಸಾಧಿಸಿ, ಬಾಂಗ್ಲಾದೇಶ ಉದಯಕ್ಕೆ ಕಾರಣವಾಯಿತು. ಉಪ ಪ್ರಧಾನಮಂತ್ರಿ ಹಾಗೂ ಕಾರ್ಮಿಕ ಸಚಿವರಾಗಿದ್ದ ವೇಳೆ ಶೋಷಿತರು, ದೀನ ದಲಿತರು ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಹಲವು ಮಹತ್ವದ ಕಾನೂನುಗಳನ್ನು ಜಾರಿಗೆ ತಂದರು. ಅವರು ಕೃಷಿ ಕ್ಷೇತ್ರದಲ್ಲಿ ರೂಪಿಸಿದ ಯೋಜನೆಗಳ ಆಧಾರದ ಮೇಲೆಯೇ ಇಂದಿಗೂ ಕೃಷಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಶಾಸಕರಾದ ತನ್ವೀರ್ ಸೇಠ್, ಟಿ.ಎಸ್.ಶ್ರೀವತ್ಸ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net