ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಅಧಿಕಾರಿಗಳ ಸಭೆ ನಡೆಯಿತು. ಡಾ.ಪಿ.ಸಿ. ಕುಮಾರಸ್ವಾಮಿ, ಡಾ.ಸಿರಾಜ್ ಅಹಮದ್, ಡಾ.ಗೋಪಿನಾಥ್, ಡಾ.ನಾಗರಾಜ್, ಡಾ.ಬೃಂದಾ ಇನ್ನಿತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಅಧಿಕಾರಿಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಸೂಚನೆ
ಜೂನ್ 28ರಿಂದ ಜುಲೈ 1ರವರೆಗೆ ಅಭಿಯಾನ
ಮೈಸೂರು: ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿದ್ದು, 0-5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂನ್ 28ರಂದು 1641 ಬೂತ್‌ಗಳನ್ನು ತೆರೆದು ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜೂನ್ 28 ರಂದು ಪಾಲಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ತಪ್ಪದೇ ಲಸಿಕೆ ಹಾಕಿಸಬೇಕು. ಜೂನ್ 29ರಿಂದ ಜುಲೈ 1 ರವರೆಗೆ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆ ಹಚ್ಚಲಾಗುವುದು. ಆರೋಗ್ಯ ಸಿಬ್ಬಂದಿ ಇಂತಹ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗಬಾರದು ಎಂದು ನಿರ್ದೇಶನ ನೀಡಿದರು.
ಲಸಿಕೆ ನೀಡಲು ಜಿಲ್ಲೆಯಲ್ಲಿ 7,78,059 ಮನೆಗಳನ್ನು ಹಾಗೂ 0-5 ವರ್ಷದೊಳಗಿನ 2,19,521 ಮಕ್ಕಳನ್ನು ಗುರುತಿಸಲಾಗಿದೆ 1641 ಬೂತ್ ತೆರೆದು ಲಸಿಕೆ ನೀಡಲಾಗುವುದು. ಲಸಿಕೆ ನೀಡಲು 6,772 ವ್ಯಾಕ್ಸಿನೇಟರ್ ಹಾಗೂ 328 ಸೂಪರ್‌ವೈಸರ್‌ಗಳನ್ನು ನೇಮಕ ಮಾಡಲಾಗುವುದು ಎಂದರು.
ಕಟ್ಟಡ ಕಾರ್ಮಿಕರು, ಇಟ್ಟಿಗೆ ತಯಾರು ಮಾಡುವ ಕಾರ್ಮಿಕರು, ವಲಸೆ ಕಾರ್ಮಿಕರು ವಾಸಿಸುವ ಸ್ಥಳ ಸೇರಿದಂತೆ ಇನ್ನಿತರ 1396 ಹೈ ರಿಸ್ಕ್ ಏರಿಯಾಗಳನ್ನು ಗುರುತು ಮಾಡಲಾಗಿರುತ್ತದೆ. ಲಸಿಕೆ ನೀಡಲು 51 ಸಂಚಾರಿ ತಂಡವನ್ನು ಸಹ ರಚಿಸಲಾಗಿರುತ್ತದೆ. ಹೈರಿಸ್ಕ್ ಏರಿಯಾ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.
ಆರ್‌ಸಿಎಚ್ ಅಧಿಕಾರಿ ಡಾ.ಸಿರಾಜ್ ಅಹಮದ್ ಮಾತನಾಡಿ, ದೇಶದಲ್ಲಿ 2011ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿದ್ದು, ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಪಘಾನಿಸ್ತಾನಗಳಲ್ಲಿ ಕೆಲವು ಪೋಲಿಯೋ ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚಿನ ನಿಗಾ ವಹಿಸುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದರು.
ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಇನ್ನಿತರ ಪ್ರವಾಸಿ ತಾಣಗಳಲ್ಲಿ ಜೂನ್ 28ರಂದು ಟ್ರನ್ಸಿಟ್ ಬೂತ್ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ವಾಸಿಸುವ ಸ್ಥಳಗಳಲ್ಲಿ ಲಸಿಕಾ ಪಡೆಯುವಂತೆ ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
2025ನೇ ಸಾಲಿನಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಜಿಲ್ಲೆಯಲ್ಲಿ 2,22,084 ಮಕ್ಕಳಿಗೆ ಲಸಿಕೆ ನೀಡಲು ಗುರಿ ನಿಗದಿಪಡಿಸಲಾಗಿತ್ತು. 2,33,484 ಮಕ್ಕಳಿಗೆ ಲಸಿಕೆ ನೀಡಿ ಶೇ.105.13 ಸಾಧನೆ ಮಾಡಲಾಗಿದೆ ಎಂದರು.
ಈ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ, ಸ್ವಯಂಸೇವಾ ಸಂಸ್ಥೆಗಳು ಸೇರಿದಂತೆ ಇನ್ನಿತರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಗೋಪಿನಾಥ್, ಡಾ.ನಾಗರಾಜ್, ಡಾ.ಬೃಂದಾ, ಡಾ.ಸುವರ್ಣಾ, ತಾಲೂಕು ವೈದ್ಯಾಧಿಕಾರಿಗಳಾದ ಡಾ.ರವಿಕುಮಾರ್, ಡಾ.ಪುಟ್ಟತಾಯಮ್ಮ, ಡಾ.ಈಶ್ಚರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.