ಕಬಿನಿ ಹಿನ್ನೀರಿನಲ್ಲಿ ಪರಿಸರ ಸಂರಕ್ಷಣೆಗೆ ಸಮಿತಿ

ಕಬಿನಿ
ಕಬಿನಿ
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಆದೇಶ

ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಬಿನಿ ಹಿನ್ನೀರಿನ ಪ್ರದೇಶಗಳಲ್ಲಿ ರೆಸಾರ್ಟ್, ಹೋಂಸ್ಟೇ, ಹೋಟೆಲ್‌ಗಳು ಹಾಗೂ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಸ್ಕರಿಸದ ದ್ರವ ಮತ್ತು ಘನ ತ್ಯಾಜ್ಯವನ್ನು ಪರಿಸರಕ್ಕೆ ವಿಸರ್ಜಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಇದರಿಂದ ಜಲಮೂಲಗಳು, ಅರಣ್ಯ ಪ್ರದೇಶ ಹಾಗೂ ಜೀವವೈವಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಪರಿಸರ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆ.
ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ನಡೆಯುತ್ತಿರುವುದರಿಂದ ಕಬಿನಿ ಜಲಾಶಯದ ಜಲಮೂಲಗಳ ಗುಣಮಟ್ಟ ಕುಸಿಯುವ ಆತಂಕ ವ್ಯಕ್ತವಾಗಿದೆ. ಇದರಿಂದ ಪರಿಸರ ಸಮತೋಲನಕ್ಕೆ ಧಕ್ಕೆಯಾಗುವುದರ ಜತೆಗೆ ಜಲಚರ ಜೀವಿಗಳು, ಅರಣ್ಯ ಪ್ರದೇಶದ ಜೀವವೈವಿಧ್ಯ, ಸಾರ್ವಜನಿಕ ಆರೋಗ್ಯ ಹಾಗೂ ಕುಡಿಯುವ ನೀರಿನ ಮೂಲಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಮಾಲಿನ್ಯಕ್ಕೆ ಕಾರಣವಾಗಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವುದು ಹಾಗೂ ಆರೋಪಗಳಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಮಿತಿ ರಚಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ ಅವರನ್ನು ತನಿಖಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಎಚ್.ಡಿ.ಕೋಟೆ ತಾಪಂ ಇಒ ರವಿಚಂದ್ರ ಸದಸ್ಯ ಕಾರ್ಯದರ್ಶಿ, ಕಬಿನಿ ಯೋಜನೆಯ ಕಾರ್ಯಪಾಲಕ ಅಭಿಯಂತರ ರಂಗಯ್ಯ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಸುನೀಲ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಮಿತಿಯು ಸ್ಥಳ ಪರಿಶೀಲನೆ ನಡೆಸಿ, ಸಂಬಂಧಿತ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳೊಂದಿಗೆ ಸಮಗ್ರ ವರದಿ ಸಿದ್ಧಪಡಿಸಬೇಕು. ಕಬಿನಿ ನೀರಿನ ಮಾಲಿನ್ಯಕ್ಕೆ ಕಾರಣಕರ್ತರ ವಿರುದ್ಧ ಕೈಗೊಂಡ ಕ್ರಮದ ವಿವರಗಳೊಂದಿಗೆ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಸಮಿತಿಯ ಪ್ರಮುಖ ಕರ್ತವ್ಯ:

ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ರೆಸಾರ್ಟ್, ಹೋಟೆಲ್, ಹೋಂಸ್ಟೇಗಳು ಹಾಗೂ ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳ ಮಾಹಿತಿ ಸಂಗ್ರಹಿಸುವುದು, ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಕಾನೂನುಬದ್ಧ ವ್ಯವಸ್ಥೆಗಳನ್ನು ಸಂಸ್ಥೆಗಳು ಹೊಂದಿವೆಯೇ ಎಂಬುದನ್ನು ಪರಿಶೀಲಿಸುವುದು, ತ್ಯಾಜ್ಯವನ್ನು ಪರಿಸರಕ್ಕೆ ನೇರವಾಗಿ ಬಿಡಲಾಗುತ್ತಿದೆಯೇ ಎಂಬುದನ್ನು ಸ್ಥಳ ಪರಿಶೀಲನೆ ಮೂಲಕ ಖಚಿತಪಡಿಸಿಕೊಳ್ಳುವುದು, ತ್ಯಾಜ್ಯವನ್ನು ಅಕ್ರಮವಾಗಿ ವಿಲೇವಾರಿ, ಕಾನೂನುಗಳ ಉಲ್ಲಂಘನೆ ಕಂಡುಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳುವುದು, ಅಗತ್ಯವಿದ್ದಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಮಾನ್ಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಕಳುಹಿಸುವುದು, ಕಬಿನಿ ಜಲಾಶಯಕ್ಕೆ ಮಾಲಿನ್ಯ ಉಂಟುಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸಮಿತಿಯ ಕಾರ್ಯವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net