6ರಂದು ಪ್ರತಿಭಾನ್ವಿತರಿಗೆ ಅಭಿನಂದನೆ

 ರಾಜು ಆಚಾರ್
ರಾಜು ಆಚಾರ್
Published on

ಪ್ರಮುಖ ಮುಖ್ಯಾಂಶಗಳು

  • ರಾಜು ಆಚಾರ್ ಮಾಹಿತಿ
  • ವಿಶ್ವಕರ್ಮ ಯುವ ಬ್ರಿಗೇಡ್ ಆಯೋಜನೆ
ಎಚ್.ಡಿ.ಕೋಟೆ: ವಿಶ್ವಕರ್ಮ ಯುವ ಬ್ರಿಗೇಡ್ ವತಿಯಿಂದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸೆ.6ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬ್ರಿಗೇಡ್ ಅಧ್ಯಕ್ಷ ರಾಜು ಆಚಾರ್ ತಿಳಿಸಿದರು.
ಎರಡೂ ತಾಲೂಕುಗಳ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, 120ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಸಮಾಜದ ಯುವಜನರಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಲಿದ್ದಾರೆ. ವಿಶ್ವಕರ್ಮ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ವಿಶ್ವಕರ್ಮ ನಿಗಮದ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ವಿರಾಟ್ ವಿಶ್ವ ಗ್ಲೋಬಲ್ ಫೌಂಡೇಷನ್‌ನ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಪ್ರಭಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಸಿಬ್ಬಂದಿ ಶ್ರೀಕಂಠಾಚಾರ್ ಹಾಗೂ ಡಾ.ಆರ್.ಎಚ್.ಪವಿತ್ರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಘವೇಂದ್ರ ಪ್ರಸಾದ್ ಹಾಗೂ ರಾಜು ಕಾರ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ರಿಗೇಡ್ ಕಾರ್ಯದರ್ಶಿ ಲೋಕೇಶ್, ಖಜಾಂಚಿ ಜನಾರ್ದನ್, ಮಾಜಿ ಅಧ್ಯಕ್ಷ ನಿಂಗರಾಜು ಬಿ.ಆಚಾರ್, ನಿರ್ದೇಶಕರಾದ ಪ್ರದೀಪ್ ಕುಮಾರ್, ಶೇಖರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net