ಮೇಕೆದಾಟು ಯೊಜನೆ ಅನುಮತಿಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
ಮೇಕೆದಾಟು ಕುಡಿಯುವ ನೀರು ಯೋಜನೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ಎಸ್.ರಾಜೇಶ್, ಬಿ.ಜಿ.ಕೇಶವ, ಎಸ್.ಎ.ರಹೀಂ, ಬಾಬು, ನಾಸೀರ್, ಮಹಮ್ಮದ್ ಜಾಫರ್ ಇನ್ನಿತರರಿದ್ದರು.
ಮೇಕೆದಾಟು ಕುಡಿಯುವ ನೀರು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಚಿಕ್ಕ ಗಡಿಯಾರದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ತೆರಳಿ ಈ ಯೋಜನೆಗೆ ಅನುಮತಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಸಲ್ಲಿಸಲಾಗಿದ್ದ ಸಮಗ್ರ ಯೋಜನಾ ವರದಿ(ಡಿಪಿಆರ್) ವಾಪಸ್ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಪರಿಷ್ಕೃತ ಯೋಜನಾ ವರದಿಗೆ ತಕ್ಷಣವೇ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದರು.
ಅಂದಾಜು 9,000ರಿಂದ 14,000 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, 67 ಟಿಎಂಸಿ ನೀರು ಸಂಗ್ರಹಣೆಯ ಸಾಮರ್ಥ್ಯ ಇದೆ. ಪ್ರಸ್ತುತ ಜಲಾಶಯ ಯೋಜನೆ ಮೂಲಕ 400 ಮೆಗಾವ್ಯಾಟ್ ಜಲವಿದ್ಯುತ್ ಉತ್ಪಾದನೆ ಮಾಡಬಹುದು.
ಬೆಂಗಳೂರು ಮಹಾನಗರಕ್ಕೆ 4ರಿಂದ 5 ಟಿಎಂಸಿ ಸೇರಿದಂತೆ ಬೆಂಗಳೂರು, ರಾಮನಗರ ಹಾಗೂ ಚನ್ನಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ. ಮಳೆಗಾಲದಲ್ಲಿ ಸಮುದ್ರ ಸೇರುವ ಸುಮಾರು 6 ರಿಂದ 7 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬಹುದಾಗಿದೆ. ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ ಎಂದು ಹೇಳಿದರು.
ತಮಿಳುನಾಡಿಗೆ ನಿಗದಿ ಪಡಿಸಿದ ಕಾವೇರಿ ನದಿ ಮೂಲಕ ನೀರನ್ನು ಹರಿಸಲು ಕರ್ನಾಟಕ ಬದ್ಧವಾಗಿದೆ. ಬರಗಾಲದ ಸಂದರ್ಭದಲ್ಲಿ ಕೆಆರ್‌ಎಸ್ ಜಲಾಶಯದಿಂದ ಬಿಟ್ಟ ನೀರನ್ನು ಮೇಕೆದಾಟು ಬಳಿ ಶೇಖರಿಸಿ, ಸಂಕಷ್ಟದ ಕಾಲದಲ್ಲಿ ಬಳಸಿಕೊಳ್ಳುವುದರಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ರೈತರಿಗೆ ಅನುಕೂಲವಾಗಲಿದೆ.
ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಡಳಿತಾತ್ಮಕ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.