'ಪರಂಪರೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚಿಸಿ'

ಗ್ರೇಟರ್ ಮೈಸೂರು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು.
ಗ್ರೇಟರ್ ಮೈಸೂರು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.
  • ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ, ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.
  • ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ವಿಶಾಲ ರಸ್ತೆ ಇರಬೇಕು.
  • ಉದ್ಯೋಗ ಸೃಷ್ಟಿಯಿಂದ ಘನತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ.
ಮೈಸೂರು: ನಗರದ ಪರಂಪರೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಗ್ರೇಟರ್ ಮೈಸೂರು ರಚನೆ ಸಂಬಂಧ ಶಾರದಾದೇವಿನಗರದ ಪಾಲಿಕೆ ವಲಯ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ನಗರದ ಪರಂಪರೆ, ಸಂಸ್ಕೃತಿಗೆ ಧಕ್ಕೆ ಆಗಬಾರದು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್‌ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ನೀಲಿನಕ್ಷೆ ಸಿದ್ಧಪಡಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು. 
ಗ್ರೇಟರ್ ಮೈಸೂರು ಸುಸಜ್ಜಿತವಾಗಿ, ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ, ಮುಂದಿನ 15ರಿಂದ 20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ ಎಂದು ತಿಳಿಸಿದರು.
ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ ತಂತ್ರಜ್ಞಾನದ ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.
ಬಡಾವಣೆಗಳು ನಿರ್ಮಾಣ ಆಗುವಾಗ ಚರಂಡಿ, ರಸ್ತೆ, ಒಳಚರಂಡಿ, ನೀರು, ವಿದ್ಯುತ್ ಜತೆಗೆ ಪಾರ್ಕ್‌ಗಳು ವ್ಯವಸ್ಥಿತವಾಗಿರಬೇಕು. ಮೈಸೂರಿಗೆ ಮತ್ತೊಂದು ಹೊರವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಸಿದ್ಧಪಡಿಸಿಕೊಳ್ಳಿ ಎಂದು ತಿಳಿಸಿದರು. 
ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು. ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು ಎಂದು ಸೂಚನೆ ನೀಡಿದರು. ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ. ಅದಕ್ಕೆ ಧಕ್ಕೆಯಾದಂತೆ ನೋಡಿಕೊಳ್ಳಬೇಕು. ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ ಎಂದರು. 
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ತನ್ವೀರ್‌ಸೇಠ್, ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್, ಸಿ.ಎನ್.ಮಂಜೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ಶಿವಕುಮಾರ್, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ಕುಮಾರ್, ನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net