ಕುತೂಹಲ, ಕ್ರಿಯಾಶೀಲತೆ ವಿಜ್ಞಾನದ ಜೀವಾಳ : ಡಾ.ಸಿ.ಜಿ. ಬೆಟಸೂರಮಠ

 ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ‘ವಿಸ್ತಾರ-2026’ ಕಾರ್ಯಕ್ರಮವನ್ನು ಮಂಗಳವಾರ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರಮಠ ಉದ್ಘಾಟಿಸಿದರು. ಮಲ್ಲಿಕಾರ್ಜುನ್ ಬಾಲದಂಡಿ, .ಎಸ್. ತನುಜಾ, ಡಾ.ಡಿ.ಎಸ್.ಪ್ರತಿಮಾ ಹಾಗೂ ಇತರರು ಇದ್ದರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ‘ವಿಸ್ತಾರ-2026’ ಕಾರ್ಯಕ್ರಮವನ್ನು ಮಂಗಳವಾರ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರಮಠ ಉದ್ಘಾಟಿಸಿದರು. ಮಲ್ಲಿಕಾರ್ಜುನ್ ಬಾಲದಂಡಿ, .ಎಸ್. ತನುಜಾ, ಡಾ.ಡಿ.ಎಸ್.ಪ್ರತಿಮಾ ಹಾಗೂ ಇತರರು ಇದ್ದರು.
Published on
ಮೈಸೂರು: ಕುತೂಹಲ ಮತ್ತು ಕ್ರಿಯಾಶೀಲತೆ ವಿಜ್ಞಾನದ ಜೀವಾಳ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರಮಠ ಅಭಿಪ್ರಾಯಪಟ್ಟರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೈನ್ಸ್ ರೋಸ್ಟ್ರಮ್ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಿರುವ ರಾಜ್ಯಮಟ್ಟದ ‘ವಿಸ್ತಾರ-2026’ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಕುತೂಹಲ ಮತ್ತು ಕ್ರಿಯಾಶೀಲತೆ ವಿಜ್ಞಾನದ ಜೀವಾಳವಾಗಿದೆ. ವಿಜ್ಞಾನದಲ್ಲಿ ಆವಿಷ್ಕಾರಗಳು ಸರಳ ಪ್ರಶ್ನೆಯಿಂದ ಆರಂಭವಾಗುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನಶೀಲತೆಯನ್ನು ರೂಢಿಸಿಕೊಂಡಾಗ ಮಾತ್ರ ಯಶಸ್ಸು ದೊರೆಯುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಶೋಧನಾ ಮನೋಭಾವ, ಸಂವಹನ ಕೌಶಲ, ಶಿಸ್ತು, ಸಮಯಪಾಲನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಾಗ ಪ್ರಗತಿ ಹೊಂದಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಮಾತನಾಡಿ, ನಮ್ಮ ದೈನಂದಿನ ಬದುಕಿನ ಕ್ರಿಯಾ ಚಟುವಟಿಕೆಗಳಲ್ಲಿ ವೈಜ್ಞಾನಿಕ ದೃಷ್ಟಿಯ ಅಗತ್ಯವಿದೆ. ಇಂದಿನ ವರ್ತಮಾನದಲ್ಲಿ ಬದುಕುವಾಗ ನೀವು ಕಲಿತಿರುವ ಕೌಶಲಗಳು ಮುಖ್ಯ ಪಾತ್ರವಹಿಸುತ್ತವೆ ಎಂದು ತಿಳಿಸಿದರು. ಪ್ರತಿಯೊಬ್ಬರಲ್ಲೂ ಸಾಮರ್ಥ್ಯವಿರುತ್ತದೆ. ಸತತ ಪ್ರಯತ್ನದಿಂದ ಯಶಸ್ಸು ಸಾಧಿಸುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯ ವ್ಯವಸ್ಥಾಪಕಿ ವಿ.ಎಸ್. ತನುಜಾ ಮಾತನಾಡಿ, ನಾನು ಈ ಕಾಲೇಜಿನ ವಿದ್ಯಾರ್ಥಿನಿ ಎನ್ನಲು ಹೆಮ್ಮೆಯಾಗುತ್ತಿದೆ ಜೆಎಸ್‌ಎಸ್ ಸಂಸ್ಥೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶ್ರದ್ಧೆಯಿಂದ ತಯಾರಿ ನಡೆಸಿ, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹೇಳಿದರು.
ಮೈಸೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ.ಡಿ.ಎಸ್.ಪ್ರತಿಮಾ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಪಾಲನೆಯನ್ನು ರೂಢಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕುತೂಹಲ ಬೆಳೆಸಿಕೊಂಡು ವೈಜ್ಞಾನಿಕ ಜಗತ್ತಿನಲ್ಲಿ ಉತ್ತಮ ಸಾಧನೆ ಮಾಡಿ ಎಂದು ತಿಳಿಸಿದರು.
ಪ್ರಾಂಶುಪಾಲ ಡಾ. ರೇಚಣ್ಣ, ಸಂಚಾಲಕರಾದ ಡಿ.ಬಿ. ಯಶವಂತ್, ಪಿ.ಆರ್. ರಾಜೇಶ್ವರಿ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net