ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹ

 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಎಡಿಸಿ ಐಶ್ವರ್ಯಾ ಅವರಿಗೆ ಮನವಿ ಸಲ್ಲಿಸಲಾಯಿತು. ಎಸ್.ವಿ.ನೀತುಶ್ರೀ, ಸದಸ್ಯರಾದ ಎಸ್.ಸುಮಾ, ರಣಜಿತ್ ಧೂಪತ್ ಮತ್ತು ಪೂರ್ಣಿಮಾ ಇನ್ನಿತರರಿದ್ದರು.
ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಎಡಿಸಿ ಐಶ್ವರ್ಯಾ ಅವರಿಗೆ ಮನವಿ ಸಲ್ಲಿಸಲಾಯಿತು. ಎಸ್.ವಿ.ನೀತುಶ್ರೀ, ಸದಸ್ಯರಾದ ಎಸ್.ಸುಮಾ, ರಣಜಿತ್ ಧೂಪತ್ ಮತ್ತು ಪೂರ್ಣಿಮಾ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮನವಿ ಸಲ್ಲಿಕೆ
  • ಎಲ್ಲ ರೀತಿಯ ಪರೀಕ್ಷಾ ಅಕ್ರಮ ತಡೆಗಟ್ಟಲು ಹಾಗೂ ಪಾರದರ್ಶಕ ನೇಮಕಾತಿಗಾಗಿ ಕೆಪಿಎಸ್‌ಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೊಳಿಸಿ
  • ಎಲ್ಲ ನೇಮಕಾತಿಗಳ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು.
ಮೈಸೂರು: ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು. ಕೆಪಿಎಸ್‌ಸಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿ ವರದಿ ಜಾರಿಗೊಳಿಸಬೇಕೆಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಐಶ್ವರ್ಯಾ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಹೋರಾಟಗಳ ಪ್ರತಿಫಲವಾಗಿ ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಆಯೋಜಿಸಿದ್ದ ಚಳಿಗಾಲದ ಅಧಿವೇಶನದಲ್ಲಿ 56,432 ಹುದ್ದೆ ಭರ್ತಿ ಮಾಡುವುದಾಗಿ ಘೋಷಿಸಿತ್ತು. 
ನಂತರವೂ ವಿವಿಧ ಇಲಾಖೆಗಳ ಸಚಿವರು ಶೀಘ್ರದಲ್ಲಿ ನೇಮಕಾತಿ ಮಾಡುತ್ತೇವೆ ಎಂದು ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ಭ್ರಮನಿರಸನ ಉಂಟು ಮಾಡಿದೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಈ ಘೋಷಣೆ ಮಾಡಿ ಐದು ತಿಂಗಳು ಕಳೆದಿದ್ದರೂ ಈವರೆಗೂ ಯಾವುದೇ ನೇಮಕಾತಿಗೆ ಅಧಿಸೂಚನೆ ಹೊರಡಿಸಿಲ್ಲ. ಆದ್ದರಿಂದ ಉದ್ಯೋಗಾಕಾಂಕ್ಷಿಗಳು ಸರ್ಕಾರದ ಘೋಷಣೆ ನಂಬಲು ಸಾಧ್ಯವಾಗದೆ, ವಿಶ್ವಾಸ ಕಳೆದುಕೊಂಡು ಮತ್ತೆ ಹೋರಾಡಲು ಬೀದಿಗಿಳಿಯಬೇಕಾಗಿದೆ ಎಂದು ಸಮಿತಿಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆಯೂ ವರದಿಗಳು ಬಂದಿದ್ದು ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸುತ್ತಾ ಬಂದಿದೆ.
 ಈ ಹಿಂದೆ ಕೂಡ ಕೆಪಿಎಸ್‌ಸಿ ನಡೆಸಿದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರಗಳು ನಡೆದಿವೆ. ಆದ್ದರಿಂದ ಈ ಸಂಸ್ಥೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮುಂದಿನ ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ನಡೆಯುವಂತೆ ಖಾತ್ರಿಪಡಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.

ಹಕ್ಕೊತ್ತಾಯಗಳು:

 56,432 ಹುದ್ದೆಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಎಲ್ಲ ರೀತಿಯ ಪರೀಕ್ಷಾ ಅಕ್ರಮ ತಡೆಗಟ್ಟಲು ಹಾಗೂ ಪಾರದರ್ಶಕ ನೇಮಕಾತಿಗಾಗಿ ಕೆಪಿಎಸ್‌ಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. 
ಎಲ್ಲ ನೇಮಕಾತಿಗಳ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು. ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ. 
ಎಲ್ಲ ನೇಮಕಾತಿ ಪ್ರಾಧಿಕಾರಗಳು ಪ್ರತಿವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉದ್ಯೋಗಗಳ ಮೇಲಿನ ಅನುದಾನ ಕಡಿಮೆ ಮಾಡಲು, ತನ್ಮೂಲಕ ಉದ್ಯೋಗ ಕಡಿತಗೊಳಿಸಲು ಪ್ರಮುಖ ಕಾರಣವಾಗಿರುವ ಎಫ್‌ಆರ್‌ಬಿಎಂ ಕಾಯ್ದೆ-2003 ರನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಸಮಿತಿಯಿಂದ ಜಿಲ್ಲಾ ಸಂಚಾಲಕಿ ಎಸ್.ವಿ. ನೀತುಶ್ರೀ, ಸದಸ್ಯರಾದ ಎಸ್.ಸುಮಾ, ರಣಜಿತ್ ಧೂಪತ್ ಮತ್ತು ಪೂರ್ಣಿಮಾ ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net