ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆಶಾಸಕ ದರ್ಶನ್ ಶನಿವಾರ ಭೂಮಿ ಪೂಜೆ ನೆರವೇರಿಸಿದರು. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಚನ್ನಕೇಶವ ಇದ್ದರು.
ನಂಜನಗೂಡು: ತಾಲೂಕಿನ ಗ್ರಾಮಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಹುಲ್ಲಹಳ್ಳಿ ಹೋಬಳಿಯ ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಹಾಡ್ಯದ ಹುಂಡಿ, ಕೆಲ್ಲುಪುರ, ಬೇರೆದೇವನಪುರ, ಅಂಜನಪುರ ಗ್ರಾಮಗಳ ಸಾಮಾನ್ಯ ವರ್ಗದ ಬೀದಿಗಳಿಗೆ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷ ಅನುದಾನದಿಂದ ತಾಲೂಕಿಗೆ 50 ಕೋಟಿ ರೂ. ಬಿಡುಗಡೆಯಾಗಿತ್ತು. 93 ಗ್ರಾಮಗಳಿಗೆ ಗುಣಮಟ್ಟದ ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದೆ. ಈ ವರ್ಷ ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ ಸಾಮಾನ್ಯ ವರ್ಗದ 23 ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ತಾಲೂಕಿನ 157 ಗ್ರಾಮಗಳಲ್ಲಿ 30 ಗ್ರಾಮಗಳ ಅಭಿವೃದ್ಧಿ ಕಾಮಗಾರಿ ಬಾಕಿ ಇದೆ. ಹಂತ ಹಂತವಾಗಿ ಕೆಲಸ ನಿರ್ವಹಣೆ ಮಾಡಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಆದ್ಯತೆ ನೀಡುವುದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡುತ್ತಿದೆ. ಕ್ಷೇತ್ರದ ಹಲವು ಗ್ರಾಮಗಳು ಕಾಡಂಚಿನ ಪ್ರದೇಶದಲ್ಲಿವೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀಕಂಠ ನಾಯಕ, ಹರೀಶ್, ಚನ್ನಕೇಶವ ಇತರರು ಹಾಜರಿದ್ದರು.