ದೇವರಾಜ ಮಾರುಕಟ್ಟೆ, ಲ್ಯಾನ್ಸ್‌ಡೌನ್ ಕಟ್ಟಡ ಸಂರಕ್ಷಣೆಗೆ ಡಿಪಿಆರ್ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಮೈಸೂರು ನಗರ ಪಾಲಿಕೆ

ದೇವರಾಜ ಮಾರುಕಟ್ಟೆ
ದೇವರಾಜ ಮಾರುಕಟ್ಟೆ
Published on
ಮೈಸೂರು: ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ನಗರದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡದ ನವೀಕರಣ ಮತ್ತು ಸಂರಕ್ಷಣಾ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ನಿರ್ಧರಿಸಲಾಗಿದೆ ಎಂದು ನಗರ ಪಾಲಿಕೆ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಮೈಸೂರು ಮಹಾರಾಜರ ಆಳ್ವಿಕೆಯಲ್ಲಿ 1880ರ ದಶಕದಲ್ಲಿ ನಿರ್ಮಾಣಗೊಂಡ ಈ ಎರಡೂ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ.ಪ್ರಾದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ನಡೆಸಿತು.
ಜುಲೈ 13ರಂದು ನಡೆದ ಸಭೆಯಲ್ಲಿ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡದ ನವೀಕರಣ ಮತ್ತು ಸಂರಕ್ಷಣೆಗೆ ವಿವರವಾದ ಯೋಜನಾ ವರದಿ ಸಿದ್ಧಪಡಿಸಲು ನಗರ ಪಾಲಿಕೆ ನಿರ್ಧರಿಸಿದೆ ಎಂದು ಪಾಲಿಕೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ನಿರ್ಧಾರವನ್ನು ದಾಖಲೆಯಲ್ಲಿ ಸೇರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿತು.
ಎರಡೂ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ಅಧಿಕಾರಿಗಳು ನಿರ್ಧರಿಸಿರುವುದಕ್ಕೆ ನ್ಯಾಯಪೀಠ ಸಂತೋಷ ವ್ಯಕ್ತಪಡಿಸಿತು. ಭಾರತವು ತನ್ನ ಶ್ರೀಮಂತ ಇತಿಹಾಸ ಮತ್ತು ಪರಂಪರೆಗೆ ಹೆಸರುವಾಸಿಯಾಗಿದೆ. ಸಾಧ್ಯವಾದಷ್ಟು ಅದನ್ನು ಸಂರಕ್ಷಿಸಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಮೇ 4ರಂದು ನೀಡಿದ್ದ ಆದೇಶದಲ್ಲಿ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡಗಳನ್ನು ಸಂರಕ್ಷಿಸಿ ಅಗತ್ಯ ನವೀಕರಣ ಮತ್ತು ಸಂರಕ್ಷಣೆ ಕಾರ್ಯಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಲ್ಯಾನ್ಸ್ ಡೌನ್ ಕಟ್ಟಡ

ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡವನ್ನು ಕೆಡವುದು ಅಥವಾ ಪುನರ್ ನಿರ್ಮಿಸುವುದನ್ನು ತಡೆಯಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಗೌರಿಸತ್ಯ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಮನವಿಯನ್ನು ಹೈಕೋರ್ಟ್ 2023ರಲ್ಲಿ ತಿರಸ್ಕರಿಸಿತ್ತು. ನಂತರ ಸುಪ್ರೀಂ ಕೋರ್ಟ್ ಮೊರೆ ಹೋಗಲಾಯಿತು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಎರಡೂ ಕಟ್ಟಡಗಳ ಸ್ಥಿತಿ ಹಾಗೂ ಅವುಗಳನ್ನು ಪಾರಂಪರಿಕ ಕಟ್ಟಡಗಳಾಗಿ ಎಷ್ಟರ ಮಟ್ಟಿಗೆ ಸಂರಕ್ಷಿಸಬಹುದು ಎಂಬುದನ್ನು ಪರಿಶೀಲಿಸಲು ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನಿರ್ದೇಶಕರಿಗೆ ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಮೇ 4 ರಂದು ಐಐಟಿ ರೂರ್ಕಿ ತಜ್ಞರ ಸಮಿತಿಯ ವರದಿಯನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡಗಳು ಅಗಾಧ ಪಾರಂಪರಿಕ ಮೌಲ್ಯ ಹೊಂದಿದ್ದು, ಅವುಗಳನ್ನು ಪುನಃಸ್ಥಾಪಿಸಿ ಸಂರಕ್ಷಿಸಬಹುದಾಗಿದೆ ಎಂಬ ಸಮಿತಿಯ ಅಭಿಪ್ರಾಯವನ್ನು ದಾಖಲಿಸಿತ್ತು.
ವರದಿಯ ಪ್ರಕಾರ, ಈ ಎರಡೂ ಕಟ್ಟಡಗಳು ಮೈಸೂರಿನ ನಾಗರಿಕ ವಾಸ್ತುಶಿಲ್ಪ ಪರಂಪರೆಯ ಪ್ರಮುಖ ಭಾಗವಾಗಿದ್ದು, ಅವುಗಳ ಸಂರಕ್ಷಣೆಗಾಗಿ ವೈಜ್ಞಾನಿಕ ಮೌಲ್ಯಮಾಪನ ನಡೆಸಿ ಸಂರಕ್ಷಣಾ ಯೋಜನೆಯನ್ನು ಜಾರಿಗೊಳಿಸಬೇಕಾಗಿದೆ. ಪುನಃಸ್ಥಾಪನೆ ಕಾರ್ಯದ ಭಾಗವಾಗಿ ತೀವ್ರವಾಗಿ ಹಾನಿಗೊಳಗಾದ ಕೆಲವು ಭಾಗಗಳ ಪುನರ್ನಿರ್ಮಾಣವೂ ಅಗತ್ಯವಾಗಲಿದೆ ಎಂದು ಸಮಿತಿ ತಿಳಿಸಿದೆ.
ಇದಲ್ಲದೆ, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ ನೀಡಿರುವ ಶಿಫಾರಸುಗಳು ಹಾಗೂ ಸಲಹೆಗಳನ್ನು ಸಹ ಅಧಿಕಾರಿಗಳು ಪರಿಗಣಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾದ ಇಂಟ್ಯಾಕ್ ವರದಿಯಲ್ಲಿಯೂ ಅಗತ್ಯ ದುರಸ್ತಿ ಹಾಗೂ ನವೀಕರಣದೊಂದಿಗೆ ಈ ಎರಡೂ ಕಟ್ಟಡಗಳನ್ನು ಸಂರಕ್ಷಿಸಬಹುದಾಗಿದೆ ಎಂದು ಉಲ್ಲೇಖಿಸಲಾಗಿತ್ತು.

ಸಂರಕ್ಷಣೆ ಕಾಣದ ಕಟ್ಟಡ

ಶತಮಾನದ ಇತಿಹಾಸ ಹೊಂದಿರುವ ಪಾರಂಪರಿಕ ‘ಲ್ಯಾನ್ಸ್‌ಡೌನ್’ ಕಟ್ಟಡ 2012 ಆಗಸ್ಟ್ 23,24 ರಂದು ಸುರಿದ ಧಾರಾಕಾರ ಮಳೆಗೆ ಆ.25 ರಂದು ಸಂಜೆ 6ಕ್ಕೆ ಕಟ್ಟಡದ ಒಂದು ಭಾಗ ಕುಸಿದು ನಾಲ್ವರು ಮೃತಪಟ್ಟಿದ್ದರು. ಲ್ಯಾನ್ಸ್‌ಡೌನ್ ಕಟ್ಟಡದ ದಕ್ಷಿಣ ಭಾಗದ ಮೊದಲ ಮಹಡಿಯ ಕೊಠಡಿ ಸಂಖ್ಯೆ 10, 11 ಮತ್ತು ನೆಲಮಾಳಿಗೆಯ 17ರ ಮೇಲ್ಛಾವಣಿ ಕುಸಿದಿತ್ತು. 11 ಜನವರಿ 2015 ರಂದು ಲ್ಯಾನ್ಸ್‌ಡೌನ್ ಕಟ್ಟಡದ ಜತೆಗೆ ದುಸ್ಥಿತಿಯಲ್ಲಿದ್ದ ಶತಮಾನದ ಇತಿಹಾಸ ಹೊಂದಿರುವ ದೇವರಾಜ ಮಾರುಕಟ್ಟೆ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ದೊರೆಯಿತು. ದೇವರಾಜ ಮಾರುಕಟ್ಟೆಯನ್ನು 9 ಕೋಟಿ ರೂ., ಲ್ಯಾನ್ಸ್‌ಡೌನ್ ಕಟ್ಟಡವನ್ನು 6 ಕೋಟಿ ರೂ.ವೆಚ್ಚದಲ್ಲಿ ಸಂರಕ್ಷಣೆ ಮಾಡುವ ಕಾಮಗಾರಿ ಕೈಗೊಳ್ಳಲಾಯಿತು. ಆದರೆ, 28 ಆಗಸ್ಟ್ 2016 ರಂದು ದೇವರಾಜ ಮಾರುಕಟ್ಟೆ ಸಂರಕ್ಷಣಾ ಕಾರ್ಯ ಸಂದರ್ಭ ಕಟ್ಟಡದ ಒಂದು ಭಾಗ ಕುಸಿದು ಬಿತ್ತು. ಹೀಗಾಗಿ ಲ್ಯಾನ್ಸ್‌ಡೌನ್ ಹಾಗೂ ದೇವರಾಜ ಮಾರುಕಟ್ಟೆಯ ಅಭಿವೃದ್ಧಿ ಕಾರ್ಯವನ್ನು ಕೈ ಬಿಡಲಾಯಿತು. ನಂತರ ಕಟ್ಟಡ ಸಂರಕ್ಷಣೆ ವಿಚಾರದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಗಳು, ಹೋರಾಟಗಳು ನಡೆಯಿತು. ಅಲ್ಲದೆ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಸುದೀರ್ಘ ಕಾನೂನು ಹೋರಾಟ ನಡೆದಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net