ತಿ.ನರಸೀಪುರ ತಾಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವ ಉದ್ಯಮಿ ಎಂ.ಸಿದ್ದರಾಜು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್,ಬ್ಯಾಗುಗಳನ್ನು ವಿತರಿಸಿದರು. ಶ್ರೀನಿವಾಸ್, ಬಿ.ಲೋಕೇಶ್, ಮಹದೇವ, ಶ್ರೀನಿವಾಸ ಪ್ರಸಾದ್, ಶೆರ್ಲಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜೆಡಿಎಸ್ ಮುಖಂಡ ಎಂ. ಸಿದ್ದರಾಜು ಅಭಿಮತ
ತಿ.ನರಸೀಪುರ: ತಾಲೂಕಿನ ಶ್ರೀರಂಗರಾಜಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಜೆಡಿಎಸ್ ಮುಖಂಡ ಹಾಗು ಕನ್ವಿತಾ ಡೆವಲಪರ್ಸ್ ಮಾಲೀಕ ಎಂ. ಸಿದ್ದರಾಜು ನೋಟ್ ಬುಕ್ ಹಾಗೂ ಬ್ಯಾಗ್‌ಗಳನ್ನು ವಿತರಿಸಿದರು.
ಕನ್ವಿತಾ ಡೆವಲಪರ್ಸ್ ಮಾಲೀಕ ಎಂ.ಸಿದ್ದರಾಜು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ಹಿಂಜರಿಕೆ ಇಲ್ಲದೆ ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅವಕಾಶಗಳು ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣವು ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳ ಕೊರತೆ ಉಂಟಾಗದಂತೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.
ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಶಾಲಾ ಆರಂಭದ ಸಂದರ್ಭದಲ್ಲಿ ನೋಟ್ ಬುಕ್, ಬ್ಯಾಗ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿ ಖರೀದಿಸುವುದು ಕೆಲವೊಮ್ಮೆ ಆರ್ಥಿಕ ಹೊರೆ ಆಗುತ್ತದೆ. ಇಂತಹ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಾಲಾ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ದೂರವಿದ್ದು, ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು, ಪಾಲಕರು ಮಾರ್ಗದರ್ಶನವನ್ನು ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬುದು ತಮ್ಮ ಆಶಯವಾಗಿದೆ. ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಗುರಿ ಸಾಧಿಸಬೇಕು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅನೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬಂದವರಾಗಿದ್ದು, ಅವರಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.
ಮಂಡಲ ಪಂಚಾಯಿತಿ ಮಾಜಿ ಚೇರ್ಮನ್ ಪುಟ್ಟಸ್ವಾಮಿ, ಸೊಸೈಟಿ ನಿರ್ದೇಶಕ ಸುಂದರ್, ಯಜಮಾನ್ ಶಿವಣ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಬಿ.ಲೋಕೇಶ್, ಯಜಮಾನ್ ಮಹದೇವ, ಶ್ರೀನಿವಾಸ ಪ್ರಸಾದ್, ಶಾಲೆಯ ಮುಖ್ಯ ಶಿಕ್ಷಕಿ ಶೆರ್ಲಿ, ಸಹ ಶಿಕ್ಷಕಿ ಶಿಲ್ಪ ಗ್ರಾಮಸ್ಥರು ಇದ್ದರು.