ಬಣ್ಣಾರಿ ಅಮ್ಮನ್ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

 ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಭೂಮಿ ಕಳೆದುಕೊಂಡ ರೈತರು ಗುರುವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಭೂಮಿ ಕಳೆದುಕೊಂಡ ರೈತರು ಗುರುವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
Published on
ಮೈಸೂರು: ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ರೈತ ಕುಟುಂಬಗಳ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಖೇತ್ ಮಜ್ದೂರ್ ಸಂಘಟನೆ (ಎಐಕೆಕೆಎಂಎಸ್) ನೇತೃತ್ವದಲ್ಲಿ ರೈತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಖಾನೆ ನಿರ್ಮಾಣಕ್ಕಾಗಿ ರೈತರು ತಮ್ಮ ಜಮೀನುಗಳನ್ನು ನೀಡಿದ್ದಾರೆ. ಈ ವೇಳೆ ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಮಕ್ಕಳಿಗೆ ಕಾರ್ಖಾನೆಯಲ್ಲಿ ಖಾಯಂ ಉದ್ಯೋಗ ನೀಡುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿತ್ತು. ಆದರೆ, ಭರವಸೆ ಮರೆತ ಹಿನ್ನೆಲೆಯಲ್ಲಿ ನಾವು ಹೋರಾಟ ನಡೆಸಿದ ಸಂದರ್ಭ 2024ರಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರೂ, ಇದುವರೆಗೂ ಭರವಸೆ ಈಡೇರಿಲ್ಲ ಎಂದು ರೈತರು ಆರೋಪಿಸಿದರು.
ಜಿಲ್ಲಾಧಿಕಾರಿಗಳು ಉದ್ಯೋಗ ನೀಡುವಂತೆ ಆದೇಶ ಹೊರಡಿಸಿದ್ದರೂ ಕಾರ್ಖಾನೆ ಆಡಳಿತ ಮಂಡಳಿ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡಲು ಮುಂದಾಗಿಲ್ಲ. ಕೆಲವರಿಗೆ ಮಾತ್ರ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿದ್ದು, ಅವರಿಗೆ ಅಗತ್ಯ ಸೌಲಭ್ಯ ಹಾಗೂ ಕನಿಷ್ಠ ವೇತನ ನೀಡದೆ ವಂಚಿಸಲಾಗುತ್ತಿದೆ ಎಂದು ರೈತರು ದೂರಿದರು.
ಕಾರ್ಖಾನೆ ನಿರ್ಮಾಣಕ್ಕಾಗಿ ಜಮೀನು ನೀಡಿದ ಬಳಿಕ ತಮ್ಮ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಜಮೀನು ಕಳೆದುಕೊಂಡಿರುವುದರಿ ಂದ ಜೀವನೋಪಾಯಕ್ಕೂ ತೊಂದರೆಯಾಗಿದೆ. ನಮ್ಮ ಸಮಸ್ಯೆಗಳನ್ನು ಕಾರ್ಖಾನೆ ಆಡಳಿತ ಮಂಡಳಿಯ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಖಾನೆಗೆ ಜಮೀನು ನೀಡಿ ನಾವು ಬೀದಿಗೆ ಬಿದ್ದಿದ್ದೇವೆ. ನಮ್ಮ ಕುಟುಂಬಗಳ ಭವಿಷ್ಯಕ್ಕಾಗಿ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು. ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದಾದರೆ, ಕಾರ್ಖಾನೆ ನಿರ್ಮಾಣಕ್ಕಾಗಿ ಪಡೆದಿರುವ ನಮ್ಮ ಜಮೀನನ್ನು ವಾಪಸ್ ನೀಡಬೇಕು ಎಂದು ರೈತರು ಆಗ್ರಹಿಸಿದರು.
ರೈತ ಕುಟುಂಬಗಳ ಬೇಡಿಕೆಯನ್ನು ಕೂಡಲೇ ಈಡೇರಿಸುವಂತೆ ಜಿಲ್ಲಾಡಳಿತ ಮಧ್ಯಪ್ರವೇಶಿಸಬೇಕು. ಕಾರ್ಖಾನೆ ಆಡಳಿತ ಮಂಡಳಿಗೆ ಸೂಕ್ತ ನಿರ್ದೇಶನ ನೀಡಿ, ಭೂಮಿ ಕಳೆದುಕೊಂಡ ಕುಟುಂಬಗಳ ಮಕ್ಕಳಿಗೆ ಖಾಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net