5 ವರ್ಷ ನಾನೇ ಸಿಎಂ, ಬಜೆಟ್ ನಾನೇ ಮಂಡಿಸುತ್ತೇನೆ : ಸಿದ್ದರಾಮಯ್ಯ ವಿಶ್ವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ
  • ಕೊಟ್ಟ ಮಾತಿಗೆ ತಪ್ಪಿ ನಡೆಯುವವನಲ್ಲ
  • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಶನಿವಾರ ಚರ್ಚೆ

ಮೈಸೂರು: ಐದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸುವ ವಿಶ್ವಾಸವನ್ನು ಮತ್ತೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರು ಬದ್ಧರಾಗಿರುತ್ತೇವೆ ಎಂದು ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಚಾರದಲ್ಲಿ ನಾನು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರತಿಯೊಬ್ಬರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಶನಿವಾರ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದರು.

ಹೈಕಮಾಂಡ್ ಏನೂ ಹೇಳಿಲ್ಲ

ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ಯಾವುದೇ ಮಾತುಗಳನ್ನು ಆಡಿಲ್ಲ. ಕೆಲವರು ನಾಯಕತ್ವ ಬದಲಾವಣೆ ವಿಚಾರವಾಗಿ ಈ ಹಿಂದೆಯೂ ಮಾತನಾಡಿದ್ದಾರೆ, ಈಗಲೂ ಮಾತನಾಡುತ್ತಿದ್ದಾರೆ. ಅವರು ದೆಹಲಿಗೂ ಹೋಗಿ ದ್ದಾರೆ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ, ಬಜೆಟ್‌ಅನ್ನು ಸಹ ನಾನೇ ಮಂಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೀಗಿರುವಾಗ ನಾನು ಉತ್ತರ ಏನು ಹೇಳಲಿ? ಸಚಿವ ಚೆಲುವರಾಯಸ್ವಾಮಿ ಹಾಗೂ ಕೆಲವು ಶಾಸಕರು ದೆಹಲಿಗೆ ಹೋಗಿದ್ದಾರೆ. ನಾನು ಚೆಲುವರಾಯಸ್ವಾಮಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದೇನೆ. ಅವರು ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಲು ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕೊಟ್ಟ ಮಾತಿಗೆ ತಪ್ಪಿ ನಡೆಯಲ್ಲ

‘ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪಿ ನಡೆಯುವವರಲ್ಲ’ ಎಂಬ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಹೌದು, ನಾನು ಕೊಟ್ಟ ಮಾತಿಗೆ ತಪ್ಪುವವನಲ್ಲ, ಕೊಟ್ಟ ಮಾತಿನ ಪ್ರಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇನೆ ಎಂದು ಜಾಣ್ಮೆಯ ಉತ್ತರ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net