ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇಗುಲದಲ್ಲಿ ಆಯೋಜಿಸಿದ್ದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಗಣ್ಯರು ಉದ್ಘಾಟಿಸಿದರು. ಸಿ.ಎನ್.ಬಸವರಾಜು, ಶೇಖರ್‌ಗೌಡ, ಕೀರ್ತಿ, ಸವಿತಾ ಇದ್ದರು.
ಮಹಿಳೆಯರಲ್ಲಿ ಜ್ಞಾನ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜ್ಞಾನವಿಕಾಸ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂದು ಮುಖಂಡ ಸಿ.ಎನ್.ಬಸವರಾಜು ಹೇಳಿದರು.
ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇಗುಲದಲ್ಲಿ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯೋಜನೆಯಿಂದ ದೊರೆಯುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಯೋಜನಾಧಿಕಾರಿ ಶೇಖರ್‌ಗೌಡ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ವಿವಿಧ ವಿಷಯಗಳ ಕುರಿತು ಅರಿವು ಮೂಡಿಸುವುದರ ಜತೆಗೆ ಅವರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.
ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಲಯ ಮೇಲ್ವಿಚಾರಕಿ ಕೀರ್ತಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸವಿತಾ, ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮೀ, ಮಂಜುಳಾ, ಸೇವಾ ಪ್ರತಿನಿಧಿ ವೀಣಾ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.