ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಬೃಂದಾ, ಮುನೀಂದ್ರಮ್ಮ, ಜಯಶಂಕರ್, ಚಂದ್ರಶೇಖರ್, ಸವಿತಾ, ರಜನಿಶಂಕರ್, ಅಂದಾನಿ, ಬಲರಾಮ್ ಇದ್ದರು.
ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಎಚ್‌ಐವಿ, ಏಡ್ಸ್‌ನಂತಹ ಸೋಂಕುಗಳಿಂದ ದೂರವಿದ್ದು, ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಬೃಂದಾ ಕರೆ ನೀಡಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಹಾಗೂ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಹಯೋಗದಲ್ಲಿ ಬುಧವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವಜನರು ಎಚ್‌ಐವಿ ಹಾಗೂ ಏಡ್ಸ್ ಕುರಿತು ವೈಜ್ಞಾನಿಕ ಮಾಹಿತಿ ತಿಳಿದುಕೊಳ್ಳುವುದರ ಜತೆಗೆ, ತಮ್ಮ ಸ್ನೇಹಿತರು ಹಾಗೂ ಸಮಾಜದ ಇತರ ಯುವಜನರಿಗೂ ಮಾಹಿತಿ ತಲುಪಿಸುವ ಮೂಲಕ ಸೋಂಕಿನ ಕುರಿತು ಜಾಗೃತಿ ಮೂಡಿಸಬೇಕು. ಎಚ್‌ಐವಿ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮುನೀಂದ್ರಮ್ಮ ಮಾತನಾಡಿ, ದೇಶದ ಹಲವು ರಾಜ್ಯಗಳಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಹೆಚ್ಚಿನ ಸಂಖ್ಯೆಯ ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ ಎಂದು ಹೇಳಿದರು.
ಕಾಲೇಜಿನ ಪ್ರಭಾರ ಆಡಳಿತಾಧಿಕಾರಿ ಜಯಶಂಕರ್ ಮಾತನಾಡಿ, ನಮಗೆ ತಿಳಿದಿರುವ ಮಾಹಿತಿಯನ್ನು ನಮ್ಮಲ್ಲೇ ಇಟ್ಟುಕೊಳ್ಳದೆ ಸ್ನೇಹಿತರು ಹಾಗೂ ಸಮಾಜದ ಯುವಜನರೊಂದಿಗೆ ಹಂಚಿಕೊಳ್ಳಬೇಕು. ಎಚ್‌ಐವಿ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ಅಲ್ಲದೆ, ಸೋಂಕು ನಿಯಂತ್ರಣ ಜತೆಗೆ ಈಗಾಗಲೇ ಎಚ್‌ಐವಿ ಸೋಂಕಿಗೆ ಒಳಗಾಗಿರುವವರನ್ನು ಸಮಾಜದಿಂದ ದೂರವಿಡದೆ, ಅವರಿಗೆ ಅಗತ್ಯ ಬೆಂಬಲ ಮತ್ತು ಗೌರವ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವಜನರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಚಾಮರಾಜೇಂದ್ರ ಕಾಲೇಜಿನ ಶೈಕ್ಷಣಿಕ ಸಂಯೋಜಕ ಚಂದ್ರಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸವಿತಾ, ಆಪ್ತಸಮಾಲೋಚಕರಾದ ರಜನಿಶಂಕರ್, ಅಂದಾನಿ, ಬಲರಾಮ್ ಹಾಗೂ ಪ್ರದೀಪ್, ಕಾಲೇಜಿನ ಕಾರ್ಯದರ್ಶಿ ಸುಮಂತ್ ಇದ್ದರು.