ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊಡಿಸಲಿ

 ಡಾ.ಯತೀಂದ್ರ ಸಿದ್ದರಾಮಯ್ಯ
ಡಾ.ಯತೀಂದ್ರ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆಗ್ರಹ
ರಾಜ್ಯದಲ್ಲಿ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲಮನ್ನಾ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ. ಕಳೆದ ಬಾರಿ ಕೇಂದ್ರ ಸರ್ಕಾರಕ್ಕೆ 36 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ದೆಹಲಿಯಲ್ಲೂ ಪ್ರತಿಭಟನೆ ನಡೆಸಲಾಗಿತ್ತು. ಕೊನೆಗೆ ನ್ಯಾಯಾಲಯದ ಮೊರೆ ಹೋದ ಬಳಿಕ ಕೇಂದ್ರದಿಂದ 3,500 ಕೋಟಿ ರೂ. ನೀಡಲಾಯಿತು ಎಂದು ಹೇಳಿದರು.
ಮೊದಲು ಬಿಜೆಪಿ ನಾಯಕರು ಕೇಂದ್ರಕ್ಕೆ ಮನವಿ ಮಾಡಿ ರಾಜ್ಯಕ್ಕೆ ಅನುದಾನ ಕೊಡಿಸಲಿ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ್ ಅವರನ್ನು ನಮ್ಮೊಂದಿಗೆ ದೆಹಲಿಗೆ ಬನ್ನಿ ಎಂದು ಕರೆದಿದ್ದಾರೆ. ಅವರೂ ನಮ್ಮೊಂದಿಗೆ ಬಂದು ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೊಡಿಸಲಿ ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದರು.
ನಾಡಹಬ್ಬ ಮೈಸೂರು ದಸರಾಗೆ ಈ ಬಾರಿ ಹೊಸತನ ತರಲು ಹಲವು ಬದಲಾವಣೆಗಳನ್ನು ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ಕರೆದಿದ್ದ ಸಭೆಯಲ್ಲಿ ನಾನೂ ಭಾಗವಹಿಸಿದ್ದೆ. ಸಭೆಯಲ್ಲಿ ಹಲವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಈ ಬಾರಿ ದಸರಾ ಮೆರವಣಿಗೆಯಲ್ಲಿ ಸೇನಾ ಟ್ಯಾಬ್ಲೋ ಇರಲಿದೆ. ಸಾಧ್ಯವಾದರೆ ಸೇನಾ ಶಸ್ತ್ರಾಸ್ತ್ರಗಳ ಪರೇಡ್ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಏರ್ ಶೋ ಆಯೋಜಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.
ದಸರಾ ಮಹೋತ್ಸವಕ್ಕೆ ಸಾಧ್ಯವಾಗುವ ಎಲ್ಲ ಬದಲಾವಣೆ ಹಾಗೂ ಹೊಸತನವನ್ನು ತರಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ಈ ಬಾರಿಯ ದಸರಾವನ್ನು ಮತ್ತಷ್ಟು ಆಕರ್ಷಕವಾಗಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net