

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಅರಣ್ಯ ಭವನದಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‌ಎಫ್‌ಒ) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಸುರೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಳಗ್ಗೆ ಸುಮಾರು 6 ಗಂಟೆಗೆ ಚಾಮರಾಜನಗರ ಲೋಕಾಯುಕ್ತ ಪೊಲೀಸರ ತಂಡ ಈ ಕಾರ್ಯಾಚರಣೆ ಆರಂಭಿಸಿ, ಸಂಜೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿತು. ಮೈಸೂರಿನ ಅರಣ್ಯ ಭವನದಲ್ಲಿರುವ ಕಚೇರಿ, ಶ್ರೀರಾಂಪುರದ 2ನೇ ಹಂತದಲ್ಲಿರುವ ನಿವಾಸ ಹಾಗೂ ಎಚ್.ಡಿ.ಕೋಟೆ ತಾಲೂಕು ಬೆಳತ್ತೂರು ಗ್ರಾಮದ ಸಹೋದರನ ನಿವಾಸದ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.
ಈ ವೇಳೆ ಶ್ರೀರಾಂಪುರ 2ನೇ ಹಂತದಲ್ಲಿರುವ ಅಪಾರ್ಟ್‌ಮೆಂಟ್ (12 ಮನೆಗಳು), ಮೈಸೂರು ತಾಲೂಕು ಕೆಂಚಲಗೂಡು ಕೆಎಚ್‌ಬಿ ಬಡಾವಣೆಯಲ್ಲಿ ಒಂದು ನಿವೇಶನ, 350 ಗ್ರಾಂ ಚಿನ್ನಾಭರಣ ಪತ್ತೆಯಾಗಿವೆ. ಆರೋಪಿಯು ಶೇ.130ಕ್ಕೂ ಅಧಿಕ ಪ್ರಮಾಣದ ಆಸ್ತಿ ಹೊಂದಿರುವುದು ದೃಢಪಟ್ಟಿದ್ದು, ಸ್ಥಿರ ಮತ್ತು ಚರಾಸ್ತಿಗಳಿಗೆ ಸಂಬಂಧಿಸಿದ ದಾಖಲಾತಿ ಅಮಾನತುಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಎಸ್‌ಪಿ ಉದೇಶ್ ಮಾಹಿತಿ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಕೆ.ಎನ್.ಸುಧಾಕರ, ಎಸ್.ಪ್ರಶಾಂತ್, ಕೆ.ಎನ್.ಗಿರೀಶ್ ಹಾಗೂ ಚಾಮರಾಜನಗರ ಮತ್ತು ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆ ಸಿಬ್ಬಂದಿ ಭಾಗಿಯಾಗಿದ್ದರು.