ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಿ:ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಣ ಉಪ ನಿರ್ದೇಶಕಿ ಎಂ.ಪಿ.ನಾಗಮ್ಮ ಸಲಹೆ

ನಗರದ ದೇವರಾಜ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು. ಎಂ.ಪಿ.ನಾಗಮ್ಮ, ಎಚ್.ಎಸ್.ಗಿರಿಜಾಂಭ, ರಾಮೇಗೌಡ, ಡಾ.ಎಂ.ಜಿ.ರಮಾನಂದ ಇತರರಿದ್ದರು.
ನಗರದ ದೇವರಾಜ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು. ಎಂ.ಪಿ.ನಾಗಮ್ಮ, ಎಚ್.ಎಸ್.ಗಿರಿಜಾಂಭ, ರಾಮೇಗೌಡ, ಡಾ.ಎಂ.ಜಿ.ರಮಾನಂದ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯ, ಉತ್ತಮ ಶಿಕ್ಷಕರು ಇದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಒಲವು ತೋರಿಸುತ್ತಿದ್ದಾರೆ
  • ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯದೆ ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಶಿಕ್ಷಣ ಪಡೆಯಬೇಕು
ಮೈಸೂರು:ಹೆಣ್ಣು ಮಕ್ಕಳಿಗೂ ಬೆಳೆಯಲು ಸಮಾನ ಅವಕಾಶಗಳಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಉಪ ನಿರ್ದೇಶಕಿ ಎಂ.ಪಿ.ನಾಗಮ್ಮ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ದೇವರಾಜ ಮೊಹಲ್ಲಾದ ದೇವರಾಜ ಸ್ವತಂತ್ರ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸಮಾರೋಪದಲ್ಲಿ ಪ್ರತಿಭಾ ಪುರಸ್ಕಾರ, ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಗಂಡು ಮಕ್ಕಳಿಗೆ ಸರಿ ಸಮನಾದ ಅವಕಾಶಗಳು ಹೆಣ್ಣು ಮಕ್ಕಳಿಗೂ ಇವೆ. ಎಲ್ಲ ಕ್ಷೇತ್ರಗಳಲ್ಲಿಯೂ ವಿದ್ಯಾರ್ಥಿನಿಯರು ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯ, ಉತ್ತಮ ಶಿಕ್ಷಕರು ಇದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಒಲವು ತೋರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದಿದವರು ಎತ್ತರ ಸ್ಥಾನಕ್ಕೆ ಏರಿದ್ದಾರೆ. ಹಾಗಾಗಿ, ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯದೆ ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಶಿಕ್ಷಣ ಪಡೆಯಬೇಕು ಎಂದು ಹೇಳಿದರು.
ದೇವರಾಜ ಬಾಲಕಿಯರ ಪದವಿಪೂರ್ವ ಕಾಲೇಜು ಉತ್ತಮ ಉಪನ್ಯಾಸಕರನ್ನು ಹೊಂದಿರುವುದರಿಂದ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ. ಆದ್ದರಿಂದ ಇಲ್ಲಿನ ವಿದ್ಯಾರ್ಥಿನಿಯರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಕಾಲೇಜಿಗೆ ಒಳ್ಳೆಯ ಹೆಸರು ತರುವಂತೆ ಪ್ರೋತ್ಸಾಹಿಸಿದರು.
ಕಳೆದ ವರ್ಷದ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಉಪ ನಿರ್ದೇಶಕಿ ಎಚ್.ಎಸ್.ಗಿರಿಜಾಂಬ, ಪ್ರಾಂಶುಪಾಲ ಡಾ.ಎಂ.ಜಿ.ರಮಾನಂದ, ವಿಶ್ರಾಂತ ಪ್ರಾಂಶುಪಾಲ ರಾಮೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net