ಮೈಸೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26 ರಂದು ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವವನ್ನು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಪಥಸಂಚಲನ ಶಿಸ್ತುಬದ್ಧವಾಗಿ ಉತ್ತಮ ರೀತಿಯಲ್ಲಿ ಬರುವಂತೆ ಪೂರ್ವಾಭ್ಯಾಸ ಮಾಡಬೇಕು. ಪಥಸಂಚಲನದಲ್ಲಿ ಭಾಗವಹಿಸಲು ಹೊಸ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ಆಕರ್ಷಿತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ವಿವಿಧ ಸಮಿತಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವಾಗತ, ಸಾಂಸ್ಕೃತಿಕ, ಸಾರಿಗೆ, ಪರೇಡ್, ಸ್ವಚ್ಛತೆ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಿದರು.
ಪ್ಲಾಸ್ಟಿಕ್ ಧ್ವಜ ನಿಷೇಧ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಕಂಡುಬಂದಲ್ಲಿ ವಶಪಡಿಸಿಕೊಂಡು ಮಾರಾಟಗಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಹಾಜರಾತಿ ಕಡ್ಡಾಯ: ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಿ ಕಡ್ಡಾಯವಾಗಿ ಬನ್ನಿಮಂಟಪದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ, ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಾತಿ ಪಡೆದು ವಿವರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಹ್ವಾನ ಪತ್ರಿಕೆ ಮುದ್ರಿಸಿ ಶಿಷ್ಟಾಚಾರದಂತೆ ಹಂಚಿಕೆ ಮಾಡುವುದು ಹಾಗೂ ಮೈದಾನದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ನಿರ್ವಹಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರು ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಡಿವೈಎಸ್‌ಪಿ ಎಚ್.ಪಿ.ವೀರಣ್ಣ, ಕೆಐಎಡಿಬಿ ಕಾರ್ಯಪಾಲಕ ಅಭಿಯಂತರ ಎಚ್.ಕೆ.ಮಾದೇಶ್, ಜಂಟಿ ಕೃಷಿ ನಿರ್ದೇಶಕ ರವಿ ಇತರರಿದ್ದರು.