ನಗರದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಬರ ನಿರ್ವಹಣೆ ಸಭೆಯನ್ನು ನಡೆಸಿದರು. ಜಿ.ಲಕ್ಷ್ಮೀಕಾಂತ ರೆಡ್ಡಿ, ಎಸ್.ಯುಕೇಶ್ ಕುಮಾರ್, ಎಂ.ಕೆ.ಸವಿತಾ ಇನ್ನಿತರರಿದ್ದರು.
ಮೈಸೂರು: ಕುಡಿಯುವ ನೀರಿಗೆ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬರ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು.
ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು, ನೀರಿನ ಮೂಲ ಗುರುತಿಸಿಕೊಳ್ಳಬೇಕು. ಅಗತ್ಯ ಇರುವ ಕಡೆ ಖಾಸಗಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದೂ ನಿರ್ದೇಶಿಸಿದರು.
ಮಳೆ ಕೊರತೆ ಉಂಟಾಗಿರುವುದರಿಂದ ಕೃಷಿ ಬೆಳೆಗಳ ಬಿತ್ತನೆಯೂ ಕಡಿಮೆ ಆಗಿದೆ. ಜತೆಗೆ ಈಗಾಗಲೇ ಬಿತ್ತನೆ ಆಗಿರುವ ಬೆಳೆಗಳ ಇಳುವರಿಯೂ ಕಡಿಮೆ ಆಗಿದೆ.
ಮುಂದಿನ ದಿನಗಳಲ್ಲಿ ಮಳೆ ಕೊರತೆ ಉಂಟಾದರೂ ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ನೋಡಿಕೊಳ್ಳಬೇಕು. ಮೇವು ಬೆಳೆಯಲು ಅಗತ್ಯ ಸಂಖ್ಯೆಯ ಮೇವು ಕಿಟ್‌ಗಳನ್ನು ವಿತರಣೆ ಮಾಡಬೇಕು. ಸಾಕಷ್ಟು ರಸಗೊಬ್ಬರದ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಈ ಸಾಲಿನ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಶೇ.45ರಷ್ಟು ಮಳೆ ಕೊರತೆ ಉಂಟಾಗಿದೆ. ಕೆಆರ್‌ಎಸ್ ಜಲಾಶಯದಲ್ಲಿ 17 ಟಿಎಂಸಿ, ಕಬಿನಿ ಡ್ಯಾಂನಲ್ಲಿ 13 ಟಿಎಂಸಿ ನೀರು, ಹೇಮಾವತಿಯ ಗೊರೂರು ಡ್ಯಾಂನಲ್ಲಿ 21 ಟಿಎಂಸಿ ನೀರು ಸಂಗ್ರಹವಿದೆ.
16 ಗ್ರಾಮಗಳಲ್ಲಿ ಟ್ಯಾಂಕರ್ ಮತ್ತು ಖಾಸಗಿ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ರಮ್ಮನಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ನೀರು ಕೊಡಲಾಗುತ್ತಿದೆ. ಪ್ರಸ್ತುತ ಇರುವ ನೀರು ಕುಡಿಯುವ ನೀರಿಗೆ ಸಾಕಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಎಂ.ಕೆ.ಸವಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.