

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಮತ್ತು ನಗರಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಡಿಯುವ ನೀರು ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೈಸೂರು ಸುಂದರ ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ನಗರದ ಸ್ವಚ್ಛತೆಯನ್ನು ಕಾಪಾಡಲು ಮನೆಮನೆಯಿಂದಲೇ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಹಸಿ ಕಸದಿಂದ ಗೊಬ್ಬರ ತಯಾರಿಸಿ, ಒಣ ಕಸವನ್ನು ಮರುಬಳಕೆಗೆ ಬಳಸುವ ಮೂಲಕ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆ ಮಾಡಬೇಕು. ನಗರಗಳ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಒಡಿಶಾದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಜಿ.ಮತಿ ವತಾನನ್ ಮಾತನಾಡಿ, ಒಡಿಶಾದಲ್ಲಿ ಸರ್ಕಾರದ ವಿವಿಧ ಯೋಜನೆಗಳು, ಜನಪ್ರತಿನಿಧಿಗಳ ಅನುದಾನ ಹಾಗೂ ಸಿಎಸ್ಆರ್ ನಿಧಿ ಬಳಸಿಕೊಂಡು ನಗರಾಭಿವೃದ್ಧಿಗೆ ಒತ್ತು ನೀಡಲಾಗಿದೆ. ಸ್ಥಳೀಯ ಇಂಜಿನಿಯರ್ಗಳ ಯೋಜನೆಗಳ ಮೂಲಕ ಸ್ವಚ್ಛತೆ ಮತ್ತು ನೀರು ಪೂರೈಕೆ ವ್ಯವಸ್ಥೆಯನ್ನು ಸುಧಾರಿಸಲಾಗಿದೆ ಎಂದರು.
ಒಡಿಶಾದ 115 ನಗರಗಳ ಪೈಕಿ 105 ನಗರಗಳಲ್ಲಿ ಶೇ.100ರಷ್ಟು ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಸಲಾಗುತ್ತಿದೆ. ಉಳಿದ 10 ನಗರಗಳಲ್ಲಿ ಶೇ.95ರಷ್ಟು ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. 24 ಗಂಟೆಗಳ ಕಾಲ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಜನರಲ್ಲಿ ವಿಶ್ವಾಸ ಮೂಡಿಸಲು ಅಂದಿನ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೇ ನಲ್ಲಿ ನೀರನ್ನು ಕುಡಿದು, ನೀರಿನ ಗುಣಮಟ್ಟದ ಬಗ್ಗೆ ಭರವಸೆ ಮೂಡಿಸಿದ್ದರು ಎಂದರು.
ಹಿಂದೆ ಪೈಪ್ಲೈನ್ ಮೂಲಕ ಕೇವಲ ಶೇ.40ರಷ್ಟು ನೀರು ಪೂರೈಕೆಯಾಗುತ್ತಿತ್ತು. ಶೇ.30ರಷ್ಟು ಮನೆಗಳಿಗಷ್ಟೇ ನಲ್ಲಿ ಸಂಪರ್ಕವಿತ್ತು. ಉಳಿದವರು ಟ್ಯಾಂಕರ್ ನೀರನ್ನು ಅವಲಂಬಿಸಿದ್ದರು. ಇದರಿಂದ ಖಾಸಗಿ ಟ್ಯಾಂಕರ್ಗಳ ಮೇಲಿನ ಅವಲಂಬನೆ ಹೆಚ್ಚಾಗಿತ್ತು. ಈಗ ಶುದ್ಧ ಕುಡಿಯುವ ನೀರಿನ ಪೂರೈಕೆಯಿಂದ ಜಾಂಡೀಸ್ನಂತಹ ಕಾಯಿಲೆಗಳು ಕಡಿಮೆಯಾಗಿದ್ದು, ಜನರ ಆರೋಗ್ಯ ಸುಧಾರಿಸಿದೆ ಎಂದರು.
ಅಲ್ಲದೆ, ಸಿಎಸ್ಆರ್ ನಿಧಿ ಹಾಗೂ ಸರ್ಕಾರದ ವಿವಿಧ ಯೋಜನೆಗಳ ನೆರವಿನಿಂದ ಸ್ಲಂ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸಿ, ಅವುಗಳನ್ನು ವಾಸಯೋಗ್ಯ ಪ್ರದೇಶಗಳಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಪೌರಾಡಳಿತ ನಿರ್ದೇಶಕ ರವೀಂದ್ರ, ನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಇದ್ದರು.