

ಚುನಾವಣಾ ಆಯೋಗದ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಕಾಂಗ್ರೆಸ್ ಜನರಲ್ಲಿ ತಪ್ಪು ಮಾಹಿತಿ ಹರಡುವ ಮೂಲಕ ಗೊಂದಲ ಸೃಷ್ಟಿಸುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡಲು ಬಿಜೆಪಿ ವತಿಯಿಂದ ರಾಜ್ಯಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ನ. 6ರಂದು ಮೈಸೂರಿನಲ್ಲಿ ಐದು ಜಿಲ್ಲೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಒಳಗೊಂಡ ಬೃಹತ್ ರ್ಯಾಲಿ ಮತ್ತು ಸಮಾವೇಶ ಆಯೋಜಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.
ಅಂದು ಬೆಳಗ್ಗೆ 10.30ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕಾರ್ಯಕರ್ತರು ಸೇರಲಿದ್ದು, ಅಲ್ಲಿಂದ ರ್ಯಾಲಿ ಆರಂಭವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುವ ರ್ಯಾಲಿ ಟೌನ್ಹಾಲ್ನಲ್ಲಿ ಸಮಾವೇಶಗೊಳ್ಳಲಿದೆ. ಸುಮಾರು 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕೇಂದ್ರ ಸಚಿವರೊಬ್ಬರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಜತೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಿ.ಟಿ.ರವಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್ಐಆರ್ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮತ್ತು ಸಿಜೆಪಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರು ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರಕ್ರಿಯೆಯ ವಾಸ್ತವಾಂಶಗಳನ್ನು ಜನರಿಗೆ ತಿಳಿಸುವ ಮೂಲಕ ಕಾಂಗ್ರೆಸ್ನ ಆರೋಪಗಳಿಗೆ ಉತ್ತರ ನೀಡಲಾಗುವುದು ಎಂದರು.
ಚುನಾವಣಾ ಆಯೋಗವು ಸ್ವತಂತ್ರ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಅದರ ವ್ಯಾಪ್ತಿಗೆ ಬರುತ್ತದೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನದ ಹಕ್ಕು ಪಡೆಯಲು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ದೇಶದಲ್ಲಿ ಈ ಹಿಂದೆ ಹಲವು ಬಾರಿ ಎಸ್ಐಆರ್ ಪ್ರಕ್ರಿಯೆ ನಡೆದಿದ್ದು, ಈಗ ನಡೆಯುತ್ತಿರುವ ಪ್ರಕ್ರಿಯೆಯನ್ನು ರಾಜಕೀಯ ವಿವಾದವನ್ನಾಗಿ ಮಾಡುವುದು ಸರಿಯಲ್ಲ. ಬೇರೆ ಊರು ಅಥವಾ ರಾಜ್ಯಗಳಿಂದ ವಲಸೆ ಬಂದು ನೆಲೆಸಿರುವವರು ಎರಡು ಕಡೆ ಮತದಾನ ಮಾಡುವಂತಿಲ್ಲ. ಅರ್ಹ ಮತದಾರರು ಒಂದೇ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಪ್ರಕ್ರಿಯೆಯ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ಬದಲು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಕೆ.ಆರ್.ಕ್ಷೇತ್ರದಲ್ಲಿ 2014ರಿಂದ ಮತದಾರರ ಸಂಖ್ಯೆ ಮತ್ತು ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳನ್ನು ಪರಿಶೀಲಿಸಲಾಗಿದೆ. ಎಷ್ಟು ಮತದಾರು ಇದ್ದರು ಹಾಗೂ ಪ್ರತಿ ಚುನಾವಣೆಯಲ್ಲಿ ಎಷ್ಟು ಮತದಾನ ಆಗುತ್ತಿತ್ತು ಎನ್ನುವುದನ್ನು ಗಮನಿಸಿದ್ದಾಗ ನಮ್ಮ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿರುವುದು ತಿಳಿಯುತ್ತದೆ. ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕೂಡ ಬಿಎಲ್ಎ-1 ಆಗಿದ್ದರು. ಅವರು ಕೂಡ ಈ ಪ್ರಕ್ರಿಯೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಹಳೆಯ ಮತದಾರರ ಪಟ್ಟಿಯ ಆಧಾರದಲ್ಲಿ ನಡೆಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಚುನಾವಣಾ ಆಯೋಗ ಒಪ್ಪಿಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಸಂಪುಟದ ತೀರ್ಮಾನದ ಬಳಿಕ ಈ ಕುರಿತು ಸ್ಪಷ್ಟತೆ ದೊರೆಯಲಿದೆ ಎಂದರು.
ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ರಾಜ್ಯದಲ್ಲಿ ಹಾಲು, ಮೊಸರು ಹಾಗೂ ಕೆಎಸ್ಆರ್ಟಿಸಿ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೆಲೆ ಏರಿಕೆಯ ಪರಿಣಾಮಗಳು ಜನರಿಗೆ ತಟ್ಟಿವೆ ಎಂದರು.
ವಕ್ತಾರ ಮೋಹನ್ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿ 200ಕ್ಕೂ ಹೆಚ್ಚಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಲಿನ ದರ ಹೆಚ್ಚಳ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬಗಳ ಆರ್ಥಿಕ ಹೊರೆಯೂ ಹೆಚ್ಚಾಗಿದೆ. ಹಾಲಿನಿಂದ ಮದ್ಯದ ವರೆಗೆ ಹಲವು ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದ್ದು, ಈ ವಿಚಾರಗಳನ್ನು ಜನರ ಮುಂದಿಡಲಾಗುವುದು ಎಂದು ಹೇಳಿದರು.
ಬಿಜೆಪಿ ವಿಭಾಗ ಸಹಪ್ರಭಾರಿ ಡಾ.ಈ.ಸಿ.ನಿಂಗರಾಜ್ಗೌಡ, ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಮಾಧ್ಯಮ ಪ್ರಮುಖ ಮಹೇಶ್ ರಾಜೇ ಅರಸು ಹಾಗೂ ಸಹವಕ್ತಾರ ಜಯಶೇಖರ ಉಪಸ್ಥಿತರಿದ್ದರು.
ಕಾಂಗ್ರೆಸ್ನವರು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಲಾಗಿದ್ದು, ಫಲಿತಾಂಶ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡಲಿದೆ.
-ಟಿ.ಎಸ್.ಶ್ರೀವತ್ಸ, ಶಾಸಕ