ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ತಡೆಗೆ ಮೈಸೂರು ಡಿಸಿ ನಿರ್ದೇಶನ

ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
Published on
ಮೈಸೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಹೇಳಿದರು.
ನಗರದ ಸಮಾಜ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್‌ಸಿ, ಎಸ್‌ಟಿ ಸಮುದಾಯದ ಮೇಲೆ ದೌರ್ಜನ್ಯ ನಡೆದರೆ ತಕ್ಷಣ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ ನಗರ ಪಾಲಿಕೆಯಿಂದ 77 ಸಮುದಾಯ ಭವನಗಳನ್ನು ನಿರ್ಮಿಸಲು ಸಮಿತಿ ರಚಿಸಲಾಗುತ್ತಿದೆ. ಹೊಲಿಗೆ ಯಂತ್ರದ ವಿತರಣೆ ಬದಲು ಲ್ಯಾಪ್‌ಟಾಪ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಮಂಚ ಹಾಗೂ ಹಾಸಿಗೆಗಳನ್ನು ನೀಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ನಗರ ಪಾಲಿಕೆಯ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಕ್ರಿಯಾ ಯೋಜನೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಿತಿ ಸದಸ್ಯರಾದ ಚಿಕ್ಕಜವರಯ್ಯ ಮಾತನಾಡಿ, ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನ ಸಕಾಲದಲ್ಲಿ ವೆಚ್ಚವಾಗುತ್ತಿಲ್ಲ. ಅರ್ಜಿ ಹಾಕಿದ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಿದರೂ ವಿದ್ಯುತ್ ಸೌಲಭ್ಯ ಕಲ್ಪಿಸಿಲ್ಲ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಸಮಿತಿ ಸದಸ್ಯರಾದ ಎಸ್.ಟಿ. ರವಿಕುಮಾರ್, ಎಸ್.ಬಸವರಾಜು, ಡಿಸಿಪಿ ಬಿಂದುಮಣಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net