ಮೈಸೂರು ಜಿಲ್ಲಾ ರೈತ ಸಮಾವೇಶ : ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ
ಇಲವಾಲ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಬಡಗಲಪುರ ನಾಗೇಂದ್ರ, ಹೊಸೂರು ಕುಮಾರ್, ಪಿ.ಮರಂಕಯ್ಯ, ಸುನಿತಾ ಪುಟ್ಟಣ್ಣಯ್ಯ ಹಾಗೂ ಇತರರು ಇದ್ದರು.
ಮೈಸೂರು: ಇಲವಾಲ ಗ್ರಾಮದಲ್ಲಿ ರಾಜ್ಯ ರೈತ ಸಂಘ ವತಿಯಿಂದ ಮಂಗಳವಾರ ಜಿಲ್ಲಾ ರೈತ ಸಮಾವೇಶ ಹಾಗೂ ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರ್ಕಾರ ರೈತ ವಿರೋಧಿಯಾದ ವಿದ್ಯುತ್ ಕಾಯ್ದೆ, ಬೀಜ ಕಾಯ್ದೆ ಹಾಗೂ ಕೃಷಿ ಮಾರುಕಟ್ಟೆ ಕಾಯ್ದೆ ಜಾರಿಗೆ ಪ್ರಯತ್ನ ನಡೆಸುತ್ತಿದ್ದು, ಈ ಕಾಯ್ದೆಯು ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತರು ಕಾಯ್ದೆಯ ಕರಡು ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, ರೈತ ಮುಖಂಡ ದಿ. ಕೆ.ಎಸ್. ಪುಟ್ಟಣ್ಣಯ್ಯ ಒಬ್ಬ ವ್ಯಕ್ತಿಯಲ್ಲ ಶಕ್ತಿ, ಪುಟ್ಟಣ್ಣಯ್ಯ ರಾಜ್ಯದ ಎಲ್ಲ ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸುತ್ತಿದ್ದರು. ಅವರು ಹಾಕಿಕೊಟ್ಟ ಹಾದಿಯಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದೇವೆ ಎಂದು ಹೇಳಿದರು.
ರಾಜ್ಯ ರೈತ ಸಂಘ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕೇಂದ್ರದಲ್ಲಿ ಕೆಟ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್ ಸರ್ಕಾರವನ್ನು ದೇಶದ ಜನರು ಕಿತ್ತೊಗೆದು ಬಿಜೆಪಿಗೆ ಅಧಿಕಾರಕ್ಕೆ ನೀಡಿದರು. ಆದರೆ ಬಿಜೆಪಿ ಸರ್ಕಾರ ರೈತರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸುವ ಗೋಜಿಗೆ ಹೋಗಿಲ್ಲ. ರೈತರ ಸಂಪೂರ್ಣ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಾರ್ಪೋರೆಟ್ ಕೃಷಿಗೆ ಒತ್ತು ನೀಡುತ್ತಿದ್ದು, ಇದರ ಪರಿಣಾಮ ರೈತರು ಹಲವಾರು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಯನ್ನು ರೈತರ ಹಿತಕ್ಕೆ ವಿರುದ್ಧವಾಗಿ ಜಾರಿಗೆ ತರುತ್ತಿದೆ. ಈ ಕಾಯ್ದೆ ಜಾರಿಗೆ ಬಂದರೆ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಸಂಪೂರ್ಣ ಸ್ಥಗಿತವಾಗಲಿದ್ದು, ಕೃಷಿ ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರ ಜತೆಗೆ ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೃಷಿ ಮಾರುಕಟ್ಟೆ ಕಾಯ್ದೆ, ಬೀಜ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ. ಈ ಕಾಯ್ದೆ ವಿರುದ್ಧ ರೈತರು ಸಂಘಟಿತ ಹೋರಾಟ ನಡೆಸುವ ಅವಶ್ಯಕತೆ ಇದೆ ಎಂದು ಕರೆ ನೀಡಿದರು.
ವೇದಿಕೆಯಲ್ಲಿ ರೈತ ಮುಖಂಡರಾದ ಹೊಸೂರು ಕುಮಾರ್, ಪಿ.ಮರಂಕಯ್ಯ, ರವಿಕಿರಣ್ ಪುಣಚ, ಸುನಿತಾ ಪುಟ್ಟಣ್ಣಯ್ಯ, ವೀರಸಂಗಯ್ಯ, ಕೆಂಪುಗೌಡ, ವಸಂತ್ ಕುಮಾರ್, ಮಹೇಶ್ ಪ್ರಭು, ಮಂಜುಳಾ, ಹೊಸಕೋಟೆ ಬಸವರಾಜ್ ಹಾಗೂ ಇತರರು ಇದ್ದರು.