ಮೈಸೂರು: ಯಾರಿಗೆ ಒಲಿಯಲಿದೆ ಮಂತ್ರಿಗಿರಿ

ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಯತೀಂದ್ರ, ತನ್ವೀರ್‌ಗೆ ಸಾಧ್ಯತೆ ಹೆಚ್ಚು
  • ಸಚಿವ ಸ್ಥಾನ ಉಳಿಸಿಕೊಳ್ಳುವರೇ ಮಹದೇವಪ್ಪ, ವೆಂಕಟೇಶ್
ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ನೂತನ ಸಚಿವ ಸಂಪುಟದಲ್ಲಿ ಜಿಲ್ಲೆಯ ಯಾವ ಶಾಸಕರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿದೆ.
ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಕುರುಬ ಸಮುದಾಯದ ಆಕ್ರೋಶ ತಣಿಸಲು ಸಿದ್ದರಾಮಯ್ಯ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವುದು ನಿಶ್ಚಿತವಾಗಿದ್ದು, ಈಗಾಗಲೇ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ದೊರೆತ್ತಿದೆ. ಈ ವಿಚಾರವನ್ನು ಸ್ವತಃ ಯತೀಂದ್ರ ಅವರೇ ಈಗಾಗಲೇ ಖಚಿತ ಪಡಿಸಿದ್ದಾರೆ. ಯತೀಂದ್ರ ಅವರಿಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂಬ ಒತ್ತಾಯ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ.
ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶಾಸಕ ತನ್ವೀರ್ ಸೇಠ್ ಅವರು ಹಿರಿತನ ಹಾಗೂ ಅಲ್ಪಸಂ ಖ್ಯಾತರ ಕೋಟಾದಡಿ ಸಚಿವ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಜಿಲ್ಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಪಸಂಖ್ಯಾತರ ಕೋಟಾದಡಿ ಜಮೀರ್ ಅಹಮದ್ ಖಾನ್ ಸಚಿವ ಸ್ಥಾನ ಪಡೆದ ಹಿನ್ನೆಲೆಯಲ್ಲಿ ತನ್ವೀರ್ ಸೇಠ್ ನಿರಾಶೆ ಅನುಭವಿಸಬೇಕಾಯಿತು.
ಸಚಿವ ಸ್ಥಾನ ವಂಚಿತರಾದರೂ ಪಕ್ಷದ ನಾಯಕತ್ವದ ಬಗ್ಗೆ ಎಲ್ಲಿಯೂ ಅಪಸ್ವರದ ಮಾತುಗಳನ್ನಾಡದೆ ಬಂದಿದ್ದ ತನ್ವೀರ್‌ಸೇಠ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಸಮಾಧಾನಪಡಿಸಲಾಗಿತ್ತು. 2013ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೂ ತನ್ವೀರ್ ಸೇಠ್ 2ನೇ ಅವಧಿಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದರು. ಇದೀಗ ಅಲ್ಪಸಂಖ್ಯಾತರ ಕೋಟಾದಡಿ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಮೊಹಮ್ಮದ್ ಹ್ಯಾರಿಸ್ ಸಚಿವ ಸ್ಥಾನಕ್ಕೆ ಕಣ್ಣಿಟ್ಟಿದ್ದರೂ ಹಿರಿತನದ ಆಧಾರದ ಮೇಲೆ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಧರಂಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ತನ್ವೀರ್ ಸೇಠ್ ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2013-18ರ ಅವಧಿಯ ಕೊನೆ ಎರಡು ವರ್ಷಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಜೀಜ್ ಸೇಠ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ 2002ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿದ ತನ್ವೀರ್ ಸೇಠ್ ನಂತರ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದರು. 2004, 2008, 2013, 2018 ಮತ್ತು 2023ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದ್ದಾರೆ.
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಪಡೆದಿದ್ದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ರೇಷ್ಮೆ, ಪಶುಸಂಗೋಪನೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ವೆಂಕಟೇಶ್ ಅವರುಗಳು ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವರೇ ಎಂಬ ಪ್ರಶ್ನೆ ಎದುರಾಗಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದವರಲ್ಲಿ ಅರ್ಧದಷ್ಟು ಸಚಿವರನ್ನು ಕೈ ಬಿಡುವ ಸಾಧ್ಯತೆ ಇದ್ದು, ಕೆ.ವೆಂಕಟೇಶ್ ಅವರನ್ನು ಕೈಬಿಡುವ ಸಾಧ್ಯತೆಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಡಾ.ಎಚ್.ಸಿ. ಮಹದೇವಪ್ಪ ಅವರು ಹೆಸರು ಸಹ ಕಾಂಗ್ರೆಸ್ ವಲಯದಲ್ಲಿ ಪ್ರಬಲವಾಗಿ ಕೇಳಿ ಬರುತ್ತಿಲ್ಲ. ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ಅವರ ಬೆಂಬಲಿಗರ ಒತ್ತಾಯವಾಗಿದೆ. 2ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಚ್.ಡಿ.ಕೋಟೆಯ ಅನಿಲ್ ಚಿಕ್ಕಮಾದು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ದ್ದಾರೆ. ಕಳೆದ ಬಾರಿ ಇವರಿಗೆ ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿತ್ತು.
ನಿಗಮ, ಮಂಡಳಿಗಳ ಮೇಲೆ ಕಣ್ಣು
ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ವಿವಿಧ ಅಕಾಡೆಮಿಗಳು, ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇರುವ ಕಾರಣ ಅನೇಕ ಮುಖಂಡರು ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಅದೇ ರೀತಿ ಅಯೂಬ್ ಖಾನ್‌ರನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ, ಎಚ್.ಡಿ. ಗಣೇಶ್‌ರನ್ನು ಮೈಲ್ಯಾಕ್ ಅಧ್ಯಕ್ಷರಾಗಿ, ಮರಿಸ್ವಾಮಿ ಅವರನ್ನು ಕಾಡಾ ಅಧ್ಯಕ್ಷರಾಗಿ, ಹಾಡ್ಯ ರಂಗಸ್ವಾಮಿ ಅವರನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ನಿಗಮ ಮಂಡಳಿಗಳಿಗೂ ಈ ಬಾರಿ ಪ್ರಬಲ ಪೈಪೋಟಿ ಕಂಡು ಬರಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net