ವಜ್ರಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀಪಾರ್ವತಿ ಸಮೇತವಾದ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಕಪಿಲಾ ನದಿಯ ಸ್ಥಾನಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಂಗಳವಾದ್ಯಗಳೊಂದಿಗೆ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದ ತೇಲುವ ದೇವಾಲಯದ ಮಾದರಿಯಲ್ಲಿದ್ದ ದೋಣಿಯಲ್ಲಿ ಕೂರಿಸಿ ಅದ್ದೂರಿಯಾಗಿ ತೆಪ್ಪೋತ್ಸವ ನಡೆಸಲಾಯಿತು. ಈ ಮನಮೋಹಕ ದೃಶ್ಯವನ್ನು ಭಕ್ತರು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಕಪಿಲಾ ನದಿಯ ಮತ್ತೊಂದು ದಡದಲ್ಲಿ ಹೆಜ್ಜಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಚಿತ್ತಾಕರ್ಷಕವಾದ ಪಟಾಕಿಗಳನ್ನು ಸಿಡಿಸುವ ಮೂಲಕ ಸಂಭ್ರಮಿಸಿದರು.