ತಿ.ನರಸೀಪುರದಲ್ಲಿ ಗ್ರಾಮಾಂತರ ಠಾಣೆ ತೆರೆಯಿರಿ

ತಿ.ನರಸೀಪುರ ಪಟ್ಟಣದ ಮಹದೇವಪ್ಪ ಸ್ಮಾರಕ ಭವನದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ಧಮೇರ್ಂದ್ರ, ಧನಂಜಯ, ಸತೀಶ್ ಇದ್ದರು.
ತಿ.ನರಸೀಪುರ ಪಟ್ಟಣದ ಮಹದೇವಪ್ಪ ಸ್ಮಾರಕ ಭವನದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ಧಮೇರ್ಂದ್ರ, ಧನಂಜಯ, ಸತೀಶ್ ಇದ್ದರು.
Published on
ತಿ.ನರಸೀಪುರ: ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥಳೀಯವಾಗಿ ಜನರ ಸಮಸ್ಯೆ ಆಲಿಸಿ, ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಪಟ್ಟಣದಲ್ಲಿ ಜನಸಂಪರ್ಕ ಸಭೆ ನಡೆಸಿದರು.
ಪಟ್ಟಣದ ನಂಜನಗೂಡು ಮುಖ್ಯ ರಸ್ತೆಯ ಎಂ.ಮಹದೇವಪ್ಪ ಸ್ಮಾರಕ ಭವನದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಮೌಖಿಕ ಹಾಗೂ ಲಿಖಿತ ಅಹವಾಲುಗಳನ್ನು ಸ್ವೀಕರಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಿ.ನರಸೀಪುರ, ಬನ್ನೂರು ಹಾಗೂ ತಲಕಾಡು ಪೊಲೀಸ್ ಠಾಣೆಗಳ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾರ್ವಜನಿಕರು, ರೈತರು, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ತಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿ ವಿಶಾಲವಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ತೆರೆಯಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಪೊಲೀಸ್ ಠಾಣೆಗೆ ಸಿಬ್ಬಂದಿ ನಿಯೋಜಿಸುವುದು, ಟ್ರಾಫಿಕ್ ಸಮಸ್ಯೆ, ನಿಗದಿತ ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುವ ಆಟೋ ರಿಕ್ಷಾಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದರು.
ಸ್ಥಳೀಯ ನಿವಾಸಿ ಕೆ.ಎನ್.ಪ್ರಭುಸ್ವಾಮಿ ಮಾತನಾಡಿ, ತಿ.ನರಸೀಪುರ ಪಟ್ಟಣದ ವ್ಯಾಪ್ತಿ ಹಾಗೂ ಜನಸಂಖ್ಯೆ ಹೆಚ್ಚುತ್ತಿದ್ದು ಪೊಲೀಸ್ ಠಾಣೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು.
ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ ಮಾತನಾಡಿ, ಆಟೋ ರಿಕ್ಷಾಗಳಲ್ಲಿ ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸಲಾಗುತ್ತಿದೆ. ಇಂತಹ ವಾಹನಗಳ ವಿರುದ್ಧ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕರೋಹಟ್ಟಿ ಕುಮಾರಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೊಳವೆ ಬಾವಿಗಳ ವಿದ್ಯುತ್ ಕೇಬಲ್ ಕಳ್ಳತನ ಹಾಗೂ ಪಿಕ್‌ಪಾಕೆಟ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಗಟ್ಟಲು ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಎಲ್ಲ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆ ಸ್ಥಾಪನೆ, ಸಿಬ್ಬಂದಿ ಕೊರತೆ ನಿವಾರಣೆ, ಟ್ರಾಫಿಕ್ ಸಮಸ್ಯೆ ಸೇರಿದಂತೆ ಕೆಲವರು ವೈಯಕ್ತಿಕ ಸಮಸ್ಯಗಳನ್ನು ಹೇಳಿದ್ದಾರೆ. ಎಲ್ಲ ವಿಷಯಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಂಜನಗೂಡು ಉಪ ವಿಭಾಗದ ಡಿವೈಎಸ್‌ಪಿ ಧಮೇರ್ಂದ್ರ, ತಿ.ನರಸೀಪುರ ಠಾಣೆ ಪೊಲೀಸ್ ನಿರೀಕ್ಷಕ ಧನಂಜಯ, ಬನ್ನೂರು ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸತೀಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net