ವೇದಿಕೆ ಶುದ್ಧೀಕರಣ ಮಾಡಿದಕ್ಕೆ ವಿರೋಧ

 ನಗರದ ರೈಲ್ವೆ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡ ಎಚ್.ವಿ.ರಾಜೀವ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಇದ್ದರು.
ನಗರದ ರೈಲ್ವೆ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡ ಎಚ್.ವಿ.ರಾಜೀವ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಇದ್ದರು.
Published on

ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ರಾಮಲೀಲಾ ಮೈದಾನದ ವೇದಿಕೆಯನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಸ್ವಾತಂತ್ರ್ಯ ದಿನದಂದು ಇಂತಹ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಬಂದಿರುವುದು ಬೇಸರದ ಸಂಗತಿ. ಮನುವಾದಿಗಳು ಜಾತ್ಯತೀತ ವ್ಯವಸ್ಥೆಗೆ ಅಪಮಾನ ಮಾಡಿದ್ದು, ಖರ್ಗೆ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಅವರು ರಾಮಲೀಲಾ ಮೈದಾನದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಕೆಲವರು ಸ್ಥಳವನ್ನು ಶುದ್ಧೀಕರಿಸಿರುವುದು ಅಸಾಂವಿಧಾನಿಕ ಹಾಗೂ ಹೇಯ ಕೃತ್ಯ. ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಬಗ್ಗೆ ಕೇಂದ್ರ ಸರ್ಕಾರ ಅಸಡ್ಡೆ ತೋರುತ್ತಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಈ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯವಿದೆಯೇ ಎಂದು ಪ್ರಶ್ನಿಸಿದರು.
ದಲಿತರು ಹಾಗೂ ಅಸ್ಪಶ್ಯರೆಂದು ಪರಿಗಣಿಸಲ್ಪಟ್ಟ ಸಮುದಾಯಗಳ ಭದ್ರತೆ ಮತ್ತು ಭವಿಷ್ಯವನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮುಖಂಡ ಎಚ್.ವಿ.ರಾಜೀವ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net