ನೀರು ಹರಿಸುವ ಆದೇಶಕ್ಕೆ ವಿರೋಧ

 ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಪ್ರತಿಭಟನೆ
ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಪ್ರತಿಭಟನೆ
Published on
ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆಯಿಂದ ಜಲಾಶಯಗಳು ಬರಿದಾಗಿವೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿಂದ ಗುರುವಾರ ಖಾಲಿ ಕೊಡಗಳನ್ನು ಹಿಡಿದು ಅಗ್ರಹಾರದ ಮಾಧವರಾವ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ವಿಚಾರದಲ್ಲಿ ಪದೇ ಪದೆ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ, ತಮಿಳುನಾಡು ಮುಖ್ಯಮಂತ್ರಿ ವಿಜಯನ್‌ಗೆ ಧಿಕ್ಕಾರ, ಮೇಕೆದಾಟು ಯೋಜನೆ ಜಾರಿಗೆ ಬರಲಿ, ರಕ್ತ ಕೊಟ್ಟೇವು ಕಾವೇರಿ ನೀರು ಬಿಡೆವು, ಕಾವೇರಿ ನಮ್ಮದು ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲಾಶಯಗಳು ಭರ್ತಿಯಾಗಿಲ್ಲ. ಕುಡಿಯುವ ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಸರಿಯಲ್ಲ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯನ್ನು ಈ ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದಾಗಬೇಕು. ಕಾವೇರಿ ನೀರಿನ ಹಕ್ಕನ್ನು ಕಾಪಾಡಲು ರಾಷ್ಟ್ರೀಯ ಜಲನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಪದಾಧಿಕಾರಿಗಳಾದ ಮಧುವನ ಚಂದ್ರು, ಪುರುಷೋತ್ತಮ, ದೂರ ಸುರೇಶ್, ವೇಣುಗೋಪಾಲ್, ಬಸವರಾಜು, ಮಲ್ಲೇಶ್, ಗಣೇಶ್, ಮುನಾವರ್ ಪಾಷ, ತಾಯೂರು ಗಣೇಶ್‌ಮೂರ್ತಿ, ಬಲರಾಮ್, ಲಿಂಗಯ್ಯ, ನಾಗಮ್ಮ, ನವೀನ್, ಪುಟ್ಟತಾಯಮ್ಮ, ಸಾವಿತ್ರಿ, ರುಕ್ಮಿಣಿ, ಚಂದ್ರಕಲಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net