ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆ ಖಂಡಿಸಿ ಹಾಗೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದಿಂದ ಬುಧವಾರ ನಜರ್‌ಬಾದ್‌ನಲ್ಲಿರುವ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಮತ್ತು ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಬೆಲೆ ಏರಿಕೆಯಿಂದ ರೈತರು ಉಪಯೋಗಿಸುವ ಸಾಮಗ್ರಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ರೈತರ ಕಸುಬನ್ನೇ ಬಿಡಿಸುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.
ಪ್ರಧಾನಿ ಮೋದಿ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದರು. ಆದರೆ ಚುನಾವಣೆ ಗೆದ್ದ ಮೇಲೆ ಈ ವರದಿ ಜಾರಿ ಬಗ್ಗೆ ಮಾತನಾಡಲಿಲ್ಲ. ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿ, ಆ ಮಾತನ್ನು ಈಡೇರಿಸಲಿಲ್ಲ. ಕೂಡಲೇ ಏರಿಸಿರುವ ಬೆಲೆ ಇಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಏರಿಸಿರುವ ಗೊಬ್ಬರದ ಬೆಲೆ ಇಳಿಕೆ ಮಾಡಬೇಕು. ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸಿ ರಿಯಾಯಿತಿ ದರದಲ್ಲಿ ರೈತರಿಗೆ ಗೊಬ್ಬರ ಒದಗಿಸಬೇಕು. ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ, ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸಬೇಕು. ಕೇಂದ್ರ ಸರ್ಕಾರ ಎಂ.ಎಸ್.ಸ್ವಾಮೀನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು. ಬರದ ಮುನ್ಸೂಚನೆ ಇದ್ದು ಸಮರ್ಪಕವಾಗಿ ಬರವನ್ನು ಎದುರಿಸಲು ಸರ್ಕಾರ ಸಜ್ಜಾಗಬೇಕು. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಮತ್ತು ಸಂರಕ್ಷಣಾ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ, ತಾಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ಉಪಾಧ್ಯಕ್ಷ ಮುದ್ದುರಾಜು, ಪದಾಧಿಕಾರಿಗಳಾದ ಮಹೇಶ್, ಬಸಪ್ಪ ನಾಯಕ, ನಾಗನಹಳ್ಳಿ ಚಂದ್ರಶೇಖರ್, ಮಹೇಶ್, ರಾಘವೇಂದ್ರ, ಮಹಾದೇವಮ್ಮ ಇದ್ದರು.