ಪ್ರೋತ್ಸಾಹಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಗುರುವಾರ ಜಿಲ್ಲಾ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಗುರುವಾರ ಜಿಲ್ಲಾ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಆಕ್ರೋಶ
ಮೈಸೂರು: ಬಾಕಿಯಿರುವ 3 ತಿಂಗಳ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಪಂಚಾಯಿತಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾದ್ಯಂತ 1800 ಆಶಾ ಕಾರ್ಯಕರ್ತೆಯರು ಹಗಲಿರುಳು ಎನ್ನದೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಾಯಿ-ಮಗು ಆರೈಕೆ, ಲಸಿಕಾ ಅಭಿಯಾನ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ದೊಡ್ಡದು. ಆದರೆ, ಕಳೆದ 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಬರಬೇಕಾದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಈ ಅಲ್ಪ ಸಂಭಾವನೆಯನ್ನೇ ನಂಬಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಕಳೆದ 3 ತಿಂಗಳಿಂದ ಹಣ ಬಾರದೆ ಇರುವುದರಿಂದ ದೈನಂದಿನ ಜೀವನ ನಡೆಸುವುದು, ಮನೆ ಬಾಡಿಗೆ ಕಟ್ಟುವುದು, ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಅಸಾಧ್ಯವಾಗಿದೆ. ನಿರಂತರ ಕೆಲಸದ ನಡುವೆಯೂ ನಮ್ಮ ದುಡಿತದ ಪ್ರೋತ್ಸಾಹಧನ ಇದುವರೆಗೂ ಬಾರದೆ ಆಶಾ ಕಾರ್ಯಕರ್ತೆಯರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ ಎಂದು ಬೇಸರ ಹೊರಹಾಕಿದರು.
ಅನೇಕ ಬಾರಿ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಈ ಕೂಡಲೇ ನಮ್ಮ ನ್ಯಾಯಯುತವಾದ 3 ತಿಂಗಳ ಬಾಕಿ ಪ್ರೋತ್ಸಾಹಧನವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷೆ ಪಿ.ಎಸ್.ಸಂಧ್ಯಾ, ಕಾರ್ಯದರ್ಶಿ ಮಂಜುಳಾ, ಜಂಟಿ ಕಾರ್ಯದರ್ಶಿ ಕೋಮಲಾ, ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ, ಮಣಿಲಾ, ಮಂಗಳಮ್ಮ, ತುಳಸಿ, ರೇಣುಕಾ, ಸಿದ್ದಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net