ತಾ.ಪಂ. ಇಒ ಸಿ.ಕೃಷ್ಣ ಮನವಿ ಚಾಮುಂಡಿಬೆಟ್ಟದಲ್ಲಿ ಎಸ್‌ಐಆರ್ ಜಾಗೃತಿ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗುರುವಾರ ಚಾಮುಂಡಿಬೆಟ್ಟದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಮೈಸೂರು ತಾಲೂಕು ಪಂಚಾಯಿತಿ ಹಾಗೂ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಜಾಥಾದಲ್ಲಿ ಭಕ್ತರು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ. ಕೃಷ್ಣ ಮಾತನಾಡಿ, ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಬಿಎಲ್‌ಒ ಹಾಗೂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಸಹಾಯ ಮತ್ತು ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದ್ದು, ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿ, ಅರ್ಜಿ ನಮೂನೆ ಹಾಗೂ ಇತರೆ ಸೇವೆಗಳನ್ನು ಅಲ್ಲಿ ಪಡೆಯಬಹುದಾಗಿದೆ. ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.
ಜಾಥಾದಲ್ಲಿ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ವೈ.ಎನ್. ಮಮತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,
ಕಾರ್ಯದರ್ಶಿಗಳು, ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಭಾಗವಹಿಸಿದ್ದರು.