ಚೆನ್ನಾಗಿ ಓದಿ ಜೀವನ ಉಜ್ವಲಗೊಳಿಸಿಕೊಳ್ಳಿ: ಶಾಸಕ ಕೆ.ಹರೀಶ್‌ಗೌಡ ಸಲಹೆ

ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆ.ಹರೀಶ್‌ಗೌಡ ಉದ್ಘಾಟಿಸಿದರು. ಎಂ.ಕೆ.ಸೋಮಶೇಖರ್, ಆರ್.ಪುಷ್ಪವಲ್ಲಿ, ಆರ್.ಗಿರೀಶ್, ಡಾ.ವಿ.ರೇಣುಕಾಬಾಯಿ, ಸುಶೀಲಾ ಮರಿಗೌಡ ಇತರರು ಇದ್ದರು.
ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆ.ಹರೀಶ್‌ಗೌಡ ಉದ್ಘಾಟಿಸಿದರು. ಎಂ.ಕೆ.ಸೋಮಶೇಖರ್, ಆರ್.ಪುಷ್ಪವಲ್ಲಿ, ಆರ್.ಗಿರೀಶ್, ಡಾ.ವಿ.ರೇಣುಕಾಬಾಯಿ, ಸುಶೀಲಾ ಮರಿಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಕ್ಕೆ ಬರುವ ಮುನ್ನ ಸರ್ಕಾರ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ
  • ಕಾಲೇಜಿನ ವೇಳಾಪಟ್ಟಿಗೆ ಅನುಗುಣವಾಗಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು

ಮೈಸೂರು:

ಸರ್ಕಾರ ಜನರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದನ್ನು ಅರ್ಹರು ಉಪಯೋಗಿಸಿಕೊಳ್ಳಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಹೇಳಿದರು.

ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಕುರಿತು ಅರಿವು, ವಿದ್ಯಾರ್ಥಿನಿಯೊಂದಿಗೆ ವಿಶೇಷ ಸಂವಾದ ಉದ್ಘಾಟಿಸಿ ಮಾತನಾಡಿದರು.
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಯುವ ನಿಧಿ ಯೋಜನೆ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವವರೆಗೆ ಅನುಕೂಲವಾದರೆ ಶಕ್ತಿ ಯೋಜನೆಯು ಬಸ್ ಉಚಿತ ಪ್ರಯಾಣಕ್ಕೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಈ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ವಿದ್ಯಾರ್ಥಿನಿಯರು ಸರಿಯಾಗಿ ತಿಳಿದುಕೊಂಡು ಸದುಪಯೋಗಪಡಿಸಿ ಕೊಳ್ಳಬೇಕು. ಚೆನ್ನಾಗಿ ಓದಿ ನಿಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳುವಂತೆ ಹೇಳಿದರು.
ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಪಡುವಾರಹಳ್ಳಿಯಲ್ಲಿರುವ ಕಾಲೇಜಿಗೆ ತಲುಪಲು ಎದುರಿಸುತ್ತಿರುವ ಬಸ್ ಸಮಸ್ಯೆ ಕುರಿತು ಶಾಸಕರ ಗಮನ ಸೆಳೆದಾಗ, ಕಾಲೇಜಿನ ವೇಳಾಪಟ್ಟಿಗೆ ಅನುಗುಣವಾಗಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾಲೇಜಿನ ಬಿಸಿಎ ಕೋರ್ಸ್‌ಗೆ ತರಗತಿಗಳು ಮತ್ತು ಉಪನ್ಯಾಸಕರ ಕೊರತೆ ಕುರಿತು ಪಾಲಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಶಿಕ್ಷಣ ಸಚಿವರ ಗಮನಕ್ಕೆ ತಂದು ಶೀಘ್ರವೇ ಉಪನ್ಯಾಸಕರ ನೇಮಕ ಮಾಡಲು ಕ್ರಮವಹಿಸುವುದಾಗಿ ಹೇಳಿದರು.
ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮಾತನಾಡಿ, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಲಿ ಎಂಬ ಉದ್ದೇಶದಿಂದ ಕ್ಷೇತ್ರ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿದೆ. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಪ್ಲೊಮಾ ಹಾಗೂ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗದಿದ್ದಲ್ಲಿ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಯೋಜನೆ ಅಡಿಯಲ್ಲಿ ನೀಡಲಾಗುವ ಸಹಾಯಧನವನ್ನು ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೊಬೈಲ್ ಹಾಗೂ ವ್ಯರ್ಥ ಹರಟೆಯಲ್ಲಿ ಕಾಲ ಕಳೆಯದೆ, ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಅಮೂಲ್ಯವಾದ ಸಮಯವನ್ನು ಕಳೆದುಕೊಂಡರೆ ಭವಿಷ್ಯದಲ್ಲಿ ಹಿನ್ನಡೆಯಾಗುತ್ತದೆ. ದೇಶದಲ್ಲಿ ಸಾಧನೆ ಮಾಡಿದ ಹೆಚ್ಚಿನವರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಕಷ್ಟಗಳನ್ನು ಅನುಭವಿಸಿದವರು ಜೀವನದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.
ಬರೀ ಪದವಿ ಶಿಕ್ಷಣ ಮಾತ್ರವಲ್ಲದೆ, ಇಂಗ್ಲಿಷ್ ಸಂವಹನ ಕೌಶಲ ಹಾಗೂ ಕಂಪ್ಯೂಟರ್ ಕೋರ್ಸ್‌ಗಳನ್ನು ಕಲಿಯುವುದರಿಂದ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು. ಸರ್ಕಾರವು ಮಹಿಳೆಯರ ಉಚಿತ ಬಸ್ ಪ್ರಯಾಣ (ಶಕ್ತಿ ಯೋಜನೆ) ಹಾಗೂ ಗೃಹಲಕ್ಷ್ಮಿಯೋಜನೆಗಳ ಮೂಲಕ ಸಶಕ್ತೀಕರಣಕ್ಕೆ ಒತ್ತು ನೀಡಿದೆ. ವಿದ್ಯಾರ್ಥಿನಿಯರು ತಮ್ಮ ಕಠಿಣ ಶ್ರಮದ ಮೂಲಕ ಉತ್ತಮ ಫಲಿತಾಂಶ ಪಡೆದು ಪಾಲಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಮುರಳೀಧರ್ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಮುಂದುವರಿದ ಭಾಗವಾಗಿ ‘ಯುವನಿಧಿ ಪ್ಲಸ್’ ಅನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಆದವರಿಗೆ 1,500 ರೂ. ನೆರವು ನೀಡುವುದಷ್ಟೇ ಅಲ್ಲದೆ, ಯುವಕರಲ್ಲಿ ಹೆಚ್ಚಿನ ಕೌಶಲ ಬೆಳೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕೌಶಲಾಭಿವೃದ್ಧಿ ಇಲಾಖೆಯಿಂದ ಸಂಪೂರ್ಣ ಉಚಿತವಾಗಿ ವಿವಿಧ ಉದ್ಯೋಗ ಆಧಾರಿತ ತರಬೇತಿ ನೀಡಲಾಗುತ್ತದೆ ಎಂದರು.
ಮೈಸೂರು ವಿಭಾಗದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಆರ್.ಪುಷ್ಪವಲ್ಲಿ, ಉಪಾಧ್ಯಕ್ಷ ಆರ್.ಗಿರೀಶ್, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಪ್ರಾಂಶುಪಾಲೆ ಡಾ.ವಿ.ರೇಣುಕಾಬಾಯಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ವಿವಿಧ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಎಂ.ಮಹಾದೇವ, ಸುಶೀಲಾ ಮರೀಗೌಡ, ಜೆ.ವಿನಯ್ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net